ಬಾಗಲಕೋಟೆ: ರಾಜ್ಯ ಸರಕಾರಿ ನೌಕರರ 2025–26ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು 2026ರ ಜನವರಿ 9 ಮತ್ತು 10ರಂದು ಆಯೋಜಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಅವರು ತಿಳಿಸಿದ್ದಾರೆ.
Petkarmedia: ಡಿಸಿ ಸಂಗಪ್ಪ ನೇತೃತ್ವದಲ್ಲಿ ಜಂಟಿ ಸಮಾಲೋಚನಾ ಸಮಿತಿ ಸಭೆ ನಡೆಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2025–26ನೇ ಸಾಲಿನ ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ 2023ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಮತ್ತು ಜಂಟಿ ಸಮಾಲೋಚನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿವರ್ಷದಂತೆ ಈ ವರ್ಷವೂ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಶಿಷ್ಠಾಚಾರದಂತೆ ಆಯೋಜಿಸಬೇಕು ಎಂದು ಸೂಚಿಸಿದರು. ಗಣ್ಯರಿಗೆ ಆಹ್ವಾನ ಪತ್ರಿಕೆ ವಿತರಣೆ, ಕ್ರೀಡಾಪಟುಗಳು ಹಾಗೂ ನಿರ್ಣಾಯಕರಿಗೆ ಅಗತ್ಯ ಸೌಲಭ್ಯ, ವಿಜೇತರಿಗೆ ಪ್ರಮಾಣಪತ್ರ, ಪದಕ, ಟ್ರೋಫಿ ಹಾಗೂ ಕ್ರೀಡಾಕೂಟಕ್ಕೆ ಬೇಕಾದ ಸಾಮಗ್ರಿಗಳ ಒದಗಿಸುವ ಜವಾಬ್ದಾರಿಯನ್ನು ಬಾಗಲಕೋಟೆ ಶಾಖೆಯ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷರು ವಹಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಅವರು ಮಾತನಾಡಿ, ವಿವಿಧ ಕ್ರೀಡೆಗಳಿಗೆ ನಿರ್ಣಾಯಕರಾಗಿ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಕರನ್ನು ನಿಯೋಜಿಸುವುದು ಹಾಗೂ ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರ ಕ್ರೀಡಾಪಟುಗಳಿಗೆ ಅಗತ್ಯ ವೈದ್ಯಕೀಯ ವ್ಯವಸ್ಥೆ ಒದಗಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗೆ ಸೂಚಿಸಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಿಕಾರ್ಜುನ ಬಳ್ಳಾರಿ ಅವರು ಮಾತನಾಡಿ, ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳಿಂದ ಒಟ್ಟು 2,330 ನೌಕರ ಕ್ರೀಡಾಪಟುಗಳು ಭಾಗವಹಿಸಲಿದ್ದು, ಎಲ್ಲರಿಗೂ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು. ಅಲ್ಲದೆ, 2023, 2024 ಮತ್ತು 2025ನೇ ಸಾಲಿನ ರಾಜ್ಯ ಹಾಗೂ ಜಿಲ್ಲಾ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಳಿಗೆ ಆಯ್ಕೆಯಾದವರಲ್ಲಿ, ಈ ಕಾರ್ಯಕ್ರಮದ ದಿನದಂದು 2023ನೇ ಸಾಲಿನ ಪುರಸ್ಕೃತರಿಗೆ ಮಾತ್ರ ಪ್ರಶಸ್ತಿ ವಿತರಿಸಿ ಗೌರವಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಮಂಜುನಾಥ, ಕ್ರೀಡಾ ಮತ್ತು ಯುವಜನ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಡುಗನವರ ಸೇರಿದಂತೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
Petkarmedia: ಸ್ಥಳೀಯ ಸುದ್ದಿಗಳಿಗಾಗಿ ನೋಡಿ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ