ಜಮಖಂಡಿ:ಸಾವಳಗಿಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ

ಜಮಖಂಡಿ: ತಾಲ್ಲೂಕಿನ ಸಾವಳಗಿ ಗ್ರಾಮದ ಶ್ರೀ ಅಂಬಾಭವಾನಿ ದೇವಸ್ಥಾನದ ಆವರಣದಲ್ಲಿ ತಾಲ್ಲೂಕು ಪಂಚಾಯತ್ ಜಮಖಂಡಿ ಹಾಗೂ ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ಜಮಖಂಡಿ ಇವರ ಸಂಯುಕ್ತ ಆಶ್ರಯದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ಯಾರಂಟಿ ಸಮಿತಿ ಸಭೆ ನಡೆಯಿತು.


ಸಭೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಗಳ ಮೂಲಕ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿಗಳನ್ನು ಸಾರ್ವಜನಿಕರಿಗೆ ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀ ಕಲ್ಲಪ್ಪ ಗಿರಡ್ಡಿ ಅವರು, ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಸಂಪೂರ್ಣ ಜವಾಬ್ದಾರಿ ಅಧಿಕಾರಿಗಳ ಮೇಲಿದೆ ಎಂದು ಹೇಳಿದರು. ಸಮಾಜದ ಕಟ್ಟಕಡೆಯಲ್ಲಿರುವ ಸಾಮಾನ್ಯ ಮತ್ತು ಬಡ ಕುಟುಂಬಗಳಿಗೂ ಈ ಯೋಜನೆಗಳ ಸೌಲಭ್ಯ ತಲುಪಬೇಕು. ಇನ್ನೂ ಯೋಜನೆಗಳಿಂದ ವಂಚಿತರಾಗಿರುವ ಅರ್ಹರನ್ನು ಗುರುತಿಸಿ ಅವರಿಗೆ ತಕ್ಷಣ ಸೌಲಭ್ಯ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಮಾಚಕನೂರ ಅವರು ಉಪಸ್ಥಿತರಿದ್ದು, ಗ್ಯಾರಂಟಿ ಸಮಿತಿಯ ಸದಸ್ಯರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಹೆಸ್ಕಾಂ, ಕೆಎಸ್‌ಆರ್‌ಟಿಸಿ, ಆಹಾರ ಇಲಾಖೆ, ಯುವಜನ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು, ಪಂಚ ಗ್ಯಾರಂಟಿ ಯೋಜನೆಯ ಫಲಾನುಭವಿಗಳು, ಸಾವಳಗಿ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯರು ಹಾಗೂ ಮುಖಂಡರು ಭಾಗವಹಿಸಿದ್ದರು. ಅಲ್ಲದೆ ಅಂಗನವಾಡಿ ಶಿಕ್ಷಕಿಯರು ಮತ್ತು ಆಶಾ ಕಾರ್ಯಕರ್ತೆಯರೂ ಸಭೆಯಲ್ಲಿ ಉಪಸ್ಥಿತರಿದ್ದರು.

ಗ್ರಾಮದ ಪಿಡಿಓ ಶ್ರೀ ಕಡಕೋಳ ಅವರು ಸರ್ವರನ್ನು ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶ್ರೀ ಸಂಗಮೇಶ ಮಲಕಪ್ಪನವರ ಅವರು ವಂದನಾರ್ಪಣೆ ಮಾಡಿದರು.

ಕಾಮೆಂಟ್‌ಗಳು