ಮುಧೋಳ:ಮಕರ ಸಂಕ್ರಾಂತಿ ಹಬ್ಬದ ಸಂಭ್ರಮದ ನಡುವೆಯೇ ಬಾಗಲಕೋಟೆ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಜಾಲಿಕಟ್ಟಿ ಗ್ರಾಮದಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಇಬ್ಬರು ವಿದ್ಯಾರ್ಥಿಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಮೃತ ಬಾಲಕರನ್ನು ಮನೋಜ್ (17) ಹಾಗೂ ಪ್ರಮೋದ್ ಬಡಿಗೇರ (17) ಎಂದು ಗುರುತಿಸಲಾಗಿದೆ. ಇಬ್ಬರೂ ಜಾಲಿಕಟ್ಟಿ ಗ್ರಾಮದ ನಿವಾಸಿಗಳಾಗಿದ್ದು, ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜು ಇಲ್ಲದ ಸಮಯದಲ್ಲಿ ತೇರಿನ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಸಂಕ್ರಾಂತಿ ದಿನವಾದ ಕಾರಣ ಕುಟುಂಬದವರೊಂದಿಗೆ ಸ್ನಾನಕ್ಕೆ ತೆರಳಿದ್ದ ವೇಳೆ ಜಾಲಿಕಟ್ಟಿ ಗ್ರಾಮದ ಹೊರವಲಯದಲ್ಲಿರುವ ಕಲ್ಲಿನ ಕ್ವಾರಿಯಲ್ಲಿನ ನೀರು ತುಂಬಿದ್ದ ಗುಂಡಿಗೆ ಇಳಿದಿದ್ದಾರೆ. ಈ ಸಂದರ್ಭ ತಂದೆಯ ಎದುರಲ್ಲೇ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡಿದ್ದಾರೆ ಎನ್ನಲಾಗಿದೆ.
ಘಟನೆಯ ವೇಳೆ ಮತ್ತೊಬ್ಬ ಬಾಲಕನೂ ನೀರಲ್ಲಿ ಮುಳುಗುತ್ತಿದ್ದಾಗ ಸ್ಥಳೀಯ ವ್ಯಕ್ತಿಯೊಬ್ಬರು ಸಮಯೋಚಿತವಾಗಿ ರಕ್ಷಿಸಿ ಜೀವ ಉಳಿಸಿದ್ದಾರೆ. ಸ್ಥಳೀಯರ ಸಹಾಯದಿಂದ ಮೃತ ಇಬ್ಬರನ್ನು ನೀರಿನಿಂದ ಹೊರತೆಗೆದು ಆಸ್ಪತ್ರೆಗೆ ರವಾನೆ ಮಾಡಲಾಯಿತು. ಆದರೆ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಇಬ್ಬರು ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನದಿಂದ ಜಾಲಿಕಟ್ಟಿ ಗ್ರಾಮದಲ್ಲಿ ಶೋಕಮಯ ವಾತಾವರಣ ನಿರ್ಮಾಣವಾಗಿದೆ. ಘಟನೆ ಸಂಬಂಧ ಲೋಕಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
🏷️
#BagalkotNews #BreakingNews #MakaraSankranti #MudholTaluk#JalikattiVillage#PUCStudents#DrowningIncident#QuarryAccident#KannadaNews#Petkarmedia

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ