ಬಾಗಲಕೋಟೆ:ಅಪ್ರಾಪ್ತೆಯ ಅಪಹರಿಸಿ ಅತ್ಯಾಚಾರ: ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ

ಬಾಗಲಕೋಟೆ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಆರೋಪಿಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ 2020ರಲ್ಲಿ ಈ ಘಟನೆ ನಡೆದಿತ್ತು. ಅಪ್ರಾಪ್ತೆಯನ್ನು ಪುಸಲಾಯಿಸಿ ಕರೆದೊಯ್ದ ಆರೋಪಿ, ನಂತರ ಹುಬ್ಬಳ್ಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ ಎಂದು ದೂರಿನಲ್ಲಿ ತಿಳಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಸದ್ಗುರು ಸದರಜೋಶಿ ಅವರು, ಆರೋಪಿಯಾದ ಮುತ್ತಪ್ಪ ಮಾದರ ವಿರುದ್ಧದ ಆಪಾದನೆಗಳು ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ಪ್ರಕಟಿಸಿದರು.

ಐಪಿಸಿ ಹಾಗೂ ಪೋಕ್ಸೋ ಕಾಯ್ದೆಯ ವಿವಿಧ ಕಲಂಗಳಡಿ ತಪ್ಪಿತಸ್ಥನೆಂದು ಕಂಡು, ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ.10,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದರೆ ಹೆಚ್ಚುವರಿ ಶಿಕ್ಷೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.

ಸರಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಮಹೇಶ್ ಕೆ. ಪಾಟೀಲ ಅವರು ವಾದ ಮಂಡಿಸಿದ್ದರು.

ಕಾಮೆಂಟ್‌ಗಳು