ಬಾಗಲಕೋಟೆ: ಹಿಂದೂ ಮುಖಂಡರ ಸಭೆಯಲ್ಲಿ ಹೋರಾಟದ ನಿರ್ಧಾರ; ಫೆ.26ಕ್ಕೆ ‘ಬಾಗಲಕೋಟೆ ಚಲೋ’ ಕರೆ

ಬಾಗಲಕೋಟೆ: ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿ ಹಿಂದೂ ಮುಖಂಡರ ಸಭೆ ಭಾನುವಾರ ನಗರದ ಚರಂತಿಮಠದ ಶಿವಾನುಭವ ಮಂಟಪದಲ್ಲಿ ನಡೆಯಿತು. ಸಭೆಯಲ್ಲಿ ಚರ್ಚೆಗಳ ಬಳಿಕ ಒಕ್ಕೊರಲಿನಿಂದ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು.

ನಗರದಲ್ಲಿ ಮೊದಲು ಹೋರಾಟ ನಡೆಸಿ ನಂತರ ಶಿವಾಜಿ ಜಯಂತಿ ಆಚರಿಸುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಯಿತು. ಮಸೀದಿ ಅಧ್ಯಕ್ಷ ಹಾಗೂ ಸದಸ್ಯರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಯಿತು.

ಫೆಬ್ರವರಿ 26ರಂದು “ಬಾಗಲಕೋಟೆ ಚಲೋ” ಹೋರಾಟ ನಡೆಸಲು ನಿರ್ಧಾರ ಮಾಡಲಾಗಿದ್ದು, ಜಿಲ್ಲೆಯಾದ್ಯಂತ ಹೋರಾಟ ವಿಸ್ತರಿಸುವುದಾಗಿ ಮುಖಂಡರು ತಿಳಿಸಿದ್ದಾರೆ. ಮಸೀದಿ ಅಧ್ಯಕ್ಷ ಹಾಗೂ ಸದಸ್ಯರ ಬಂಧನವಾಗುವವರೆಗೆ ಹೋರಾಟವನ್ನು ನಿರಂತರವಾಗಿ ಮುಂದುವರಿಸುವ ಎಚ್ಚರಿಕೆ ನೀಡಲಾಗಿದೆ.

ನಾಳೆ ನಗರಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಕರೆಯಿಸಿ ಮುಂದಿನ ಹೋರಾಟದ ಕುರಿತು ಚರ್ಚೆ ನಡೆಸುವ ನಿರ್ಧಾರವೂ ಕೈಗೊಳ್ಳಲಾಗಿದೆ. ಸಭೆಯಲ್ಲಿ ವಿವಿಧ ಹಿಂದೂ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.


ಕಾಮೆಂಟ್‌ಗಳು