ಉಪ ಚುನಾವಣೆ: ದಿನಾಂಕ ಘೋಷಣೆಗೆ ಮುನ್ನವೇ ಬಿಜೆಪಿ ಅಭ್ಯರ್ಥಿ ಆಯ್ಕೆ ಸಾಧ್ಯತೆ

ಬಾಗಲಕೋಟೆ ವಿಧಾನಸಭಾ ಮತಕ್ಷೇತ್ರದ ಉಪ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಪಕ್ಷವು ಚುನಾವಣಾ ದಿನಾಂಕ ಘೋಷಣೆಗೆ ಮುನ್ನವೇ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಮಾಜಿ ಶಾಸಕ ವೀರಣ್ಣ ಚರಂತಿಮಠ ತಿಳಿಸಿದ್ದಾರೆ.

ಮಂಗಳವಾರ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದ ಹೈಕಮಾಂಡ್ ಯಾವಾಗ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ ಎಂಬುದನ್ನು ನೋಡಬೇಕಿದೆ. ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡುವ ಮೊದಲು ಅಥವಾ ನಂತರ ಅಭ್ಯರ್ಥಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಚರಂತಿಮಠ, ಆ ವಿಚಾರವನ್ನು ಶಾಂತಗೌಡ ಪಾಟೀಲ ಅವರನ್ನೇ ಕೇಳಬೇಕು ಎಂದು ಹೇಳಿದರು.

ಇದಲ್ಲದೆ, ಮತದಾರರ ಪಟ್ಟಿ ಪರಿಷ್ಕರಣೆ ಈಗಾಗಲೇ ನಡೆದಿದ್ದು, ನಿಧನ ಹೊಂದಿದವರು ಹಾಗೂ ಬೇರೆಡೆಗೆ ಸ್ಥಳಾಂತರವಾದವರ ಹೆಸರುಗಳು ಇನ್ನೂ ಪಟ್ಟಿಯಲ್ಲಿ ಉಳಿದಿರುವುದನ್ನು ಚುನಾವಣಾ ಆಯೋಗ ಪರಿಶೀಲಿಸಿ, ಅವುಗಳನ್ನು ತೆಗೆದುಹಾಕುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಕಾಮೆಂಟ್‌ಗಳು