ಮುಧೋಳ ತಾಲ್ಲೂಕಿನ ಆಲಗುಂಡಿ ಗ್ರಾಮದಲ್ಲಿ ಮೂರು ಪ್ರಮುಖ ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ ಉದ್ಘಾಟನಾ ಕಾರ್ಯಕ್ರಮಗಳನ್ನು ಏಕಕಾಲದಲ್ಲಿ ನೆರವೇರಿಸಲಾಯಿತು.
ಅಬಕಾರಿ ಸಚಿವರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಬಿ. ತಿಮ್ಮಾಪೂರ ಮುಖ್ಯ ಅತಿಥಿಯಾಗಿ ಭಾಗವಹಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಆಲಗುಂಡಿ ಗ್ರಾಮದಿಂದ ಕನ್ನಿ ಹೊಲದವರೆಗೆ 0.00 ರಿಂದ 2.50 ಕಿ.ಮೀ. ವರೆಗೆ ಅಂದಾಜು ₹100 ಲಕ್ಷ ವೆಚ್ಚದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಯಿತು. ಜೊತೆಗೆ ಅಂದಾಜು ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ನಿಜಶನರಣ ಅಂಬಿಗರ ಚೌಡಯ್ಯ ಸಮುದಾಯ ಭವನ ನಿರ್ಮಾಣಕ್ಕೂ ಭೂಮಿ ಪೂಜೆ ಮಾಡಲಾಯಿತು. ಇದೇ ವೇಳೆ ಸುಮಾರು ₹5 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ತಿಮ್ಮಾಪೂರ, ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ ಸಂಪರ್ಕ, ಸಮುದಾಯ ಭವನ ಹಾಗೂ ಶುದ್ಧ ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳು ಅತ್ಯವಶ್ಯಕವಾಗಿದ್ದು, 2.50 ಕಿ.ಮೀ. ರಸ್ತೆ ಡಾಂಬರೀಕರಣದಿಂದ ಸಂಚಾರ ಸೌಲಭ್ಯ ಗಣನೀಯವಾಗಿ ಸುಧಾರಣೆಯಾಗಲಿದೆ ಎಂದರು. ಅಂಬಿಗರ ಚೌಡಯ್ಯ ಸಮುದಾಯ ಭವನವು ಸಾಮಾಜಿಕ, ಸಾಂಸ್ಕೃತಿಕ ಹಾಗೂ ಧಾರ್ಮಿಕ ಚಟುವಟಿಕೆಗಳಿಗೆ ಉತ್ತಮ ವೇದಿಕೆಯಾಗಲಿದೆ. ಶುದ್ಧ ಕುಡಿಯುವ ನೀರಿನ ಘಟಕ ಗ್ರಾಮಸ್ಥರ ಆರೋಗ್ಯಕ್ಕೆ ಮಹತ್ವದ ಕೊಡುಗೆ ನೀಡಲಿದೆ ಎಂದು ಹೇಳಿದರು.
ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಸರ್ಕಾರ ಆದ್ಯತೆ ನೀಡುತ್ತಿದ್ದು, ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಶೀಘ್ರ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಮೂರು ಕಾಮಗಾರಿಗಳೂ ಆಲಗುಂಡಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಲಿವೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕಿವಡಿ, ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲಕ್ಕಪ್ಪ ಕರೋಲಿ, ಲಕ್ಕಪ್ಪ ಬಂಡಿ, ಯಮನಪ್ಪ ಚಿಚಖಂಡಿ, ಅಶೋಕ್ ಕಲಾದಗಿ, ಸಿದ್ದು ಬಾಡಗಿ, ಅಮೀನ್ ನದಾಫ್ ಸೇರಿದಂತೆ ಪಕ್ಷದ ಮುಖಂಡರು, ಸ್ಥಳೀಯ ಗಣ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.



ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ