ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿ ಸಮೀಪ ಎರಡು ಕಲ್ಲುಗಳು ಬಂದು ಬಿದ್ದಿರುವ ಘಟನೆ ನಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Siddharth Goyal ತಿಳಿಸಿದ್ದಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು, “ಮೆರವಣಿಗೆ ಮಸೀದಿ ಬಳಿ ಬಂದಾಗ ಎರಡು ಕಲ್ಲು ಬಂದು ಬಿದ್ದಿವೆ. ಸದ್ಯ ಪರಿಸ್ಥಿತಿ ತಿಳಿಯಾಗಿದ್ದು, ನಾವು ಸಿಸಿಟಿವಿ ಹಾಗೂ ಮೊಬೈಲ್ ವಿಡಿಯೋಗಳನ್ನು ಪರಿಶೀಲನೆ ಮಾಡುತ್ತಿದ್ದೇವೆ. ನಗರದಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಲಾಗುತ್ತದೆ. ಸದ್ಯಕ್ಕೆ ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ” ಎಂದು ಹೇಳಿದರು.
ತಳ್ಳುಗಾಡಿಗಳಿಗೆ ಬೆಂಕಿ:ಕಲ್ಲು ತೂರಾಟದ ವೇಳೆ ತರಕಾರಿ ಮಾರುಕಟ್ಟೆಯ ಮೂರು ತಳ್ಳುಗಾಡಿಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಕೂಡ ನಡೆದಿದೆ. ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿ ತಕ್ಷಣ ಎಚ್ಚೆತ್ತು ಬೆಂಕಿ ನಂದಿಸುವ ಕಾರ್ಯ ಕೈಗೊಂಡು ಹೆಚ್ಚಿನ ಹಾನಿಯನ್ನು ತಪ್ಪಿಸಿದ್ದಾರೆ.
ಘಟನೆ ಕುರಿತು ಬೇಸರ ವ್ಯಕ್ತಪಡಿಸಿದ ವ್ಯಾಪಾರಿ ಜನ್ನತಬಿ ದೊಡ್ಡಮನಿ ಮಾತನಾಡಿ, “ನಮ್ಮ ತಳ್ಳುಗಾಡಿ ಸುಟ್ಟಿದ್ದಾರೆ. ಅದರಲ್ಲಿ ಚಿಲ್ಲರೆ ಹಣ, ತಕ್ಕಡಿ ಸೇರಿದಂತೆ ಎಲ್ಲಾ ವಸ್ತುಗಳು ಸುಟ್ಟು ಹೋಗಿವೆ. ಹೀಗೆ ಮಾಡಿದರೆ ಹೇಗೆ?” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಶಾಂತಿ ಕಾಪಾಡುವಂತೆ ಸಾರ್ವಜನಿಕರಿಗೆ ಪೊಲೀಸ್ ಇಲಾಖೆ ಮನವಿ ಮಾಡಿದೆ.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ