ಬಾಗಲಕೋಟೆ, ಫೆ.12: ವಿದ್ಯಾರ್ಥಿಗಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಮತ್ತು ಡಿಜಿಟಲ್ ಬಳಕೆಯ ಕುರಿತು ಜಾಗೃತಿ ಮೂಡಿಸಲು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಬಾಗಲಕೋಟೆ ಶಾಖೆ ವತಿಯಿಂದ ‘Screen Time To Activity Time’ ಕಾರ್ಯಕ್ರಮವನ್ನು ಬಸವೇಶ್ವರ ವಿಜ್ಞಾನ ಪದವಿ ಮಹಾವಿದ್ಯಾಲಯದಲ್ಲಿ ಗುರುವಾರ ಆಯೋಜಿಸಲಾಯಿತು.
ವಿದ್ಯಾರ್ಥಿಗಳು ಹೆಚ್ಚು ಸಮಯವನ್ನು ಸೃಜನಾತ್ಮಕ ಹಾಗೂ ಶಾರೀರಿಕ ಚಟುವಟಿಕೆಗಳಿಗೆ ಮೀಸಲಿಡಬೇಕು ಎಂಬುದು ಕಾರ್ಯಕ್ರಮದ ಉದ್ದೇಶವಾಗಿತ್ತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ವಿನೋದ್ ಅಕ್ಸಾಲಿ ಹಾಗೂ ಡಾ. ಡಿ.ಎಸ್. ಲಮಲಿ ಮಾತನಾಡಿ, ವಿದ್ಯಾರ್ಥಿಗಳು ಅಮೂಲ್ಯ ಸಮಯವನ್ನು ವ್ಯರ್ಥ ಮಾಡದೆ ಕ್ರೀಡೆ, ಓದು ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಬಿವಿಪಿ ಜಿಲ್ಲಾ ಸಂಚಾಲಕ ವಿಪುಲ್ ಪೇಟಕರ್ ಮಾತನಾಡಿ, ಡಿಜಿಟಲ್ ಜಗತ್ತಿನಲ್ಲಿ ಬದುಕುತ್ತಿರುವ ಯುವಕರು ತಮ್ಮ ಗುರಿಯನ್ನು ಮರೆಯದೇ ಸಮಯವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಘಟನಾ ಕಾರ್ಯದರ್ಶಿ ಸಂಜು ಹತ್ತಿಕಟಗಿ, ಎಬಿವಿಪಿ ಪ್ರಾಂತ ಖೇಲೋ ಭಾರತ ಪ್ರಮುಖ ಮಾರುತಿ ಪಾಟೋಲಿ ಹಾಗೂ ಎಬಿವಿಪಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ