ಬೆಂಗಳೂರು: ರಾಜ್ಯದ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಮುಷ್ಕರ ಕೈಗೊಳ್ಳುವ ಮುನ್ನವೇ ಅವರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಆದ್ಯತೆ ಮೇರೆಗೆ ಈಡೇರಿಸಬೇಕು ಎಂದು ವಿಧಾನಪರಿಷತ್ ಸದಸ್ಯರಾದ ಹಣಮಂತ ರು. ನಿರಾಣಿ ಒತ್ತಾಯಿಸಿದ್ದಾರೆ.
ಈ ಕುರಿತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲು ಅನುಮತಿ ಕೋರಿ ಪತ್ರ ಬರೆದಿರುವ ಅವರು, ರಾಜ್ಯದ ಜನತೆಗೆ ಆರೋಗ್ಯ ಸೇವೆ ಒದಗಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ವೈದ್ಯರಿಗೆ ಸೂಕ್ತ ಸೌಲಭ್ಯಗಳನ್ನು ನೀಡದೇ ಇರುವುದರಿಂದ ಅವರು ಹೋರಾಟಕ್ಕೆ ಇಳಿಯುವ ಪರಿಸ್ಥಿತಿ ನಿರ್ಮಾಣವಾಗಿರುವುದು ವಿಷಾದನೀಯ ಎಂದರು.
“ವೈದ್ಯೋ ನಾರಾಯಣೋ ಹರಿ” ಎಂಬಂತೆ ವೈದ್ಯರನ್ನು ದೇವರ ಸಮಾನವಾಗಿ ಗೌರವಿಸಲಾಗುತ್ತದೆ. ಸಮಾಜದ ಆರೋಗ್ಯ ರಕ್ಷಣೆಯಲ್ಲಿ ವೈದ್ಯರು ವಹಿಸುವ ತ್ಯಾಗ ಮತ್ತು ಸೇವೆಯನ್ನು ಗಮನಿಸಿ ಅವರಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವುದು ಸರ್ಕಾರದ ಕರ್ತವ್ಯ ಎಂದು ಹೇಳಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ನೌಕರರ ಹಲವು ಬೇಡಿಕೆಗಳನ್ನು ಈಡೇರಿಸದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಮತ್ತು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘವು ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿರುವುದಾಗಿ ಅವರು ತಿಳಿಸಿದ್ದಾರೆ.
ವೈದ್ಯರು ಮುಷ್ಕರಕ್ಕೆ ಇಳಿದರೆ ರಾಜ್ಯದ ರೋಗಿಗಳಿಗೆ ಗಂಭೀರ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ. ಸಮಯಕ್ಕೆ ಚಿಕಿತ್ಸೆ ಸಿಗದೆ ಸಾವು-ನೋವುಗಳು ಸಂಭವಿಸುವ ಅಪಾಯವಿರುವುದರಿಂದ ಸರ್ಕಾರ ತಕ್ಷಣವೇ ವೃಂದ ಮತ್ತು ನೇಮಕಾತಿ ನಿಯಮ ತಿದ್ದುಪಡಿ, ಜೇಷ್ಠತಾ ಪಟ್ಟಿಯ ಪ್ರಕಟಣೆ, ಮುಂಬಡ್ತಿ ಪ್ರಕ್ರಿಯೆ, ಖಾಲಿ ಹುದ್ದೆಗಳ ಭರ್ತಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ನಿರಾಣಿ ಒತ್ತಾಯಿಸಿದ್ದಾರೆ

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ