ವೀರಣ್ಣ ಚರಂತಿಮಠ ನಾಮಪತ್ರಕ್ಕೆ ಜನಸಾಗರ, ಬಿಜೆಪಿ ಆತ್ಮವಿಶ್ವಾಸ ಹೆಚ್ಚಳ
By Petkarmedia news desk| Bagalkot
ಬಾಗಲಕೋಟೆ:ವಿಧಾನಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರು ಸೋಮವಾರ ಭಾರೀ ಮೆರವಣಿಗೆಯ ನಡುವೆ ನಾಮಪತ್ರ ಸಲ್ಲಿಸಿದರು. ನಗರದ ಕಣವಿ ವೀರಭದ್ರೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಆರಂಭವಾದ ಮೆರವಣಿಗೆ ಟೆಂಕಿನಮಠ, ವಲ್ಲಭಾಯಿ ಚೌಕ್, ಜನತಾ ಬಜಾರ್ ಮಾರ್ಗವಾಗಿ ಬಸವೇಶ್ವರ ವೃತ್ತದವರೆಗೆ ಸಾಗಿತು. ಮಾರ್ಗಮಧ್ಯೆ ಸಾವಿರಾರು ಕಾರ್ಯಕರ್ತರು ಸೇರಿ ನಗರವಿಡೀ ಕೇಸರಿಮಯಗೊಂಡಿತು.
ಮೆರವಣಿಗೆಯ ನಂತರ ಬಸವೇಶ್ವರ ವೃತ್ತದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಂಸದ ಜಗದೀಶ್ ಶೆಟ್ಟರ್ ಮಾತನಾಡಿ, “ಇದು ನಾಮಪತ್ರ ಮೆರವಣಿಗೆ ಅಲ್ಲ, ವಿಜಯೋತ್ಸವದ ಮೆರವಣಿಗೆ. ಬಾಗಲಕೋಟೆಯಲ್ಲಿ ಬಿಜೆಪಿ ಶಕ್ತಿ ಏನು ಎಂಬುದನ್ನು ಕಾರ್ಯಕರ್ತರು ತೋರಿಸಿದ್ದಾರೆ” ಎಂದು ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಿಂದ ಅಭಿವೃದ್ಧಿ ಕುಂಠಿತಗೊಂಡಿದ್ದು, ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಆರೋಪಿಸಿದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, ಬಿಜೆಪಿ ಆಡಳಿತದ ಅವಧಿಯಲ್ಲಿ ಬಾಗಲಕೋಟೆ ಭಾಗದಲ್ಲಿ ಪ್ರಮುಖ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಹೇಳಿ, ಮುಂದಿನ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮನವಿ ಮಾಡಿದರು.
ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರು, “ಅಭಿವೃದ್ಧಿ ಮತ್ತು ಹಿಂದುತ್ವದ ಆಧಾರದಲ್ಲಿ ಮತ ಕೇಳುತ್ತಿದ್ದೇವೆ. ಕಮಲ ಚಿಹ್ನೆಗೆ ಮತ ನೀಡಿ ಭರ್ಜರಿ ಬಹುಮತದಿಂದ ಗೆಲ್ಲಿಸಬೇಕು” ಎಂದು ವಿನಂತಿಸಿದರು.
ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. “ಮತದಾರರು ಬದಲಾವಣೆಗೆ ಮನಸ್ಸು ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ಹೆಚ್ಚಾಗಿದೆ” ಎಂದರು.
ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ವಿಧಾನ ಪರಿಷತ್ ಸದಸ್ಯ ಪಿ.ಹೆಚ್. ಪೂಜಾರಿ ಮಾತನಾಡಿ, ಹಿಂದಿನ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಹಾಗೂ ಜಗದೀಶ್ ಶೆಟ್ಟರ್ ಅವರ ಸರ್ಕಾರಗಳು ಜನಸಮಸ್ಯೆಗಳಿಗೆ ಸ್ಪಂದಿಸಿದ್ದರೆ, ಪ್ರಸ್ತುತ ಕಾಂಗ್ರೆಸ್ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದರು. ರಾಜ್ಯದ ಜನರು ಈಗಿನ ಆಡಳಿತದಿಂದ ಬೇಸತ್ತಿದ್ದು, ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸುವ ಸಮಯ ಬಂದಿದೆ ಎಂದರು. ಬಿಜೆಪಿ ಅಭ್ಯರ್ಥಿ ಡಾ. ವೀರಣ್ಣ ಚರಂತಿಮಠ ಅವರ ಗೆಲುವು ಎಲ್ಲರಿಗೂ ಆದರ್ಶವಾಗಬೇಕು ಎಂದು ಕರೆ ನೀಡಿದರು.
ಮಾಜಿ ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಭಾರೀ ಬಿಸಿಲಿನಲ್ಲೂ ಸಾವಿರಾರು ಕಾರ್ಯಕರ್ತರು ಪಾದಯಾತ್ರೆ ಮೂಲಕ ಭಾಗವಹಿಸಿರುವುದು ಪಕ್ಷದ ಶಕ್ತಿ ತೋರಿಸುತ್ತದೆ ಎಂದರು. ಬಿಜೆಪಿ ಅಭಿವೃದ್ಧಿಗೆ ಹೆಸರುವಾಸಿಯಾಗಿದ್ದು, ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಕನಿಷ್ಠ 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು. ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಸಂಘಟಿತವಾಗಿ ಕೆಲಸ ಮಾಡಿ, ಹೆಚ್ಚಿನ ಮತಗಳನ್ನು ಸೆಳೆಯುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ್, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಶಾಸಕರಾದ ಸಿದ್ದು ಸವದಿ, ಜಿಲ್ಲಾಧ್ಯಕ್ಷ ಶಾಂತನಗೌಡ ಪಾಟೀಲ, ಮಾಜಿ ಸಚಿವರಾದ ಅರವಿಂದ್ ಲಿಂಬಾವಳಿ, ಬಿ. ಶ್ರೀರಾಮುಲು ಸೇರಿದಂತೆ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಹಲವು ನಾಯಕರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.



ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ