ಮಹಿಳಾ ಮೀಸಲಾತಿ ಜಾರಿಗೆ ಆಗ್ರಹ: ಕಾಂಗ್ರೆಸ್ ಮಹಿಳಾ ಘಟಕದ ಪ್ರತಿಭಟನೆ ಎಚ್ಚರಿಕೆ
By PetkarMedia NeWS desk: Bagalkot
ಬಾಗಲಕೋಟೆ: ಮಹಿಳಾ ಮೀಸಲಾತಿ (33%) ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಮಹಿಳಾ ಘಟಕದ ಮುಖಂಡರು ತೀವ್ರ ಧ್ವನಿ ಎತ್ತಿದ್ದಾರೆ.
ಮಂಗಳವಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಮಿತ್ರ ಗುಳಬಾಳ, ಕಾಂಗ್ರೆಸ್ ಪಕ್ಷವು ಸದಾ ಮಹಿಳೆಯರು, ಬಡವರು ಹಾಗೂ ಯುವಕರ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಬಿಜೆಪಿ ಸರ್ಕಾರ ಮಹಿಳಾ ಸಬಲೀಕರಣದ ಬಗ್ಗೆ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದ ಅವರು, “ಮಹಿಳೆಯರಿಗೆ 33% ಮೀಸಲಾತಿಯನ್ನು ಕಾನೂನುಬದ್ಧವಾಗಿ ಜಾರಿಗೆ ತರಬೇಕು. ಈ ವಿಷಯದಲ್ಲಿ ವಿಳಂಬ ಅಸಮಾಧಾನಕ್ಕೆ ಕಾರಣವಾಗಿದೆ,” ಎಂದು ತಿಳಿಸಿದರು. ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.
ಜಿಲ್ಲಾಧ್ಯಕ್ಷ ಎಸ್.ಜಿ. ನಂಜಯ್ಯನಮಠ ಮಾತನಾಡಿ, ಮಹಿಳಾ ಮೀಸಲಾತಿಗೆ ಕಾಂಗ್ರೆಸ್ ಪಕ್ಷದ ಯಾವುದೇ ವಿರೋಧವಿಲ್ಲ. ಆದರೆ, ಅದು ಸಂವಿಧಾನಬದ್ಧವಾಗಿ ಹಾಗೂ ನಿಯಮಾನುಸಾರ ಜಾರಿಯಾಗಬೇಕು ಎಂದು ಹೇಳಿದರು. “ಮಸೂದೆಗಳನ್ನು ತುರ್ತಾಗಿ ಅಂಗೀಕರಿಸುವ ಬದಲು ಸಮಗ್ರ ಚರ್ಚೆ ಅಗತ್ಯ. ಜನಗಣತಿ ಪೂರ್ಣಗೊಳ್ಳದೆ ಮೀಸಲಾತಿ ಜಾರಿಗೆ ಮುಂದಾಗಿರುವುದು ರಾಜಕೀಯ ಉದ್ದೇಶವನ್ನು ಸೂಚಿಸುತ್ತದೆ,” ಎಂದು ಅಭಿಪ್ರಾಯಪಟ್ಟರು.
ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಮಂಜುಳಾ ಕಮತಗಿ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಇದೇ ವೇಳೆ ಮಹಿಳಾ ಮೀಸಲಾತಿ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಸಹಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ