ಮೇ 3 ರಂದು ನೀಟ್ ಪರೀಕ್ಷೆ: 3727 ಪರೀಕ್ಷಾರ್ಥಿಗಳಿಗೆ 10 ಕೇಂದ್ರಗಳ ಸ್ಥಾಪನೆ – ಡಿಸಿ ಸಂಗಪ್ಪ
By PetkarMedia news desk: Bagalkot
ಬಾಗಲಕೋಟೆ: ಕರ್ನಾಟಕ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್-2026) ಮೇ 3 ರಂದು ನಡೆಯಲಿದ್ದು, ಜಿಲ್ಲಾ ಕೇಂದ್ರವಾದ ಬಾಗಲಕೋಟೆ ಹಾಗೂ ನವನಗರದಲ್ಲಿ ಒಟ್ಟು 10 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಪರೀಕ್ಷೆಗೆ ಜಿಲ್ಲೆಯ 3727 ವಿದ್ಯಾರ್ಥಿಗಳು ಹಾಜರಾಗಲಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ನೀಟ್-2026 ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಡೆಸ್ಕ್ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಬೇಸಿಗೆಯ ತಾಪಮಾನ ಹೆಚ್ಚಿರುವ ಹಿನ್ನೆಲೆ ಪರೀಕ್ಷೆಯ ಅವಧಿಯಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಕರ್ತವ್ಯಕ್ಕೆ ನಿಯೋಜಿಸಲಾದ ಸಿಬ್ಬಂದಿ ಮತ್ತು ಅಧಿಕಾರಿಗಳು ಕಡ್ಡಾಯವಾಗಿ ತರಬೇತಿಗೆ ಹಾಜರಾಗಬೇಕು. ಗೈರುಹಾಜರಿ ಅಥವಾ ಕರ್ತವ್ಯ ಲೋಪ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ನಿಯಮಾವಳಿಗಳ ಪ್ರಕಾರ, ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳು, ಮೊಬೈಲ್ ಫೋನ್, ಬ್ಲೂಟೂತ್, ಇಯರ್‌ಫೋನ್, ಕ್ಯಾಲ್ಕುಲೇಟರ್, ಸ್ಮಾರ್ಟ್ ವಾಚ್, ಪೆನ್ ಡ್ರೈವ್, ಪ್ಲಾಸ್ಟಿಕ್ ಪೌಚ್, ವಾಲೆಟ್, ಗಾಗಲ್ಸ್, ಬ್ಯಾಗ್ ಸೇರಿದಂತೆ ಯಾವುದೇ ನಿಷೇಧಿತ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.
ಪರೀಕ್ಷೆಗಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ ವತಿಯಿಂದ ಕಪ್ಪು ಬಾಲ್ ಪೆನ್ ನೀಡಲಾಗುತ್ತದೆ. ಅಭ್ಯರ್ಥಿಗಳು ಅದನ್ನೇ ಬಳಸಬೇಕು. ಬೇರೆ ಯಾವುದೇ ಜೆಲ್ ಪೆನ್ ಅಥವಾ ಇತರ ಪೆನ್ ಬಳಕೆಗೆ ಅವಕಾಶವಿಲ್ಲ. ನಿಷೇಧಿತ ವಸ್ತುಗಳು ಅಭ್ಯರ್ಥಿಯ ಬಳಿ ಪತ್ತೆಯಾದರೆ ಅದನ್ನು “ಅಕ್ರಮ ಮಾರ್ಗಗಳ ಬಳಕೆ” ಎಂದು ಪರಿಗಣಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಜಿಲ್ಲಾಡಳಿತವು ಎಲ್ಲಾ 10 ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ನೇಮಿಸಿದೆ. ಪರೀಕ್ಷೆ ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ನಡೆಯಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಜೆರಾಕ್ಸ್ ಹಾಗೂ ಕಂಪ್ಯೂಟರ್ ಕೇಂದ್ರಗಳು ಕಾರ್ಯನಿರ್ವಹಿಸಲು ಅವಕಾಶ ಇರುವುದಿಲ್ಲ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಮಾತನಾಡಿ, ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಪರೀಕ್ಷೆ ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ನಡೆಯಲಿದ್ದು, ಅಭ್ಯರ್ಥಿಗಳು ಬೆಳಿಗ್ಗೆ 11 ಗಂಟೆಯಿಂದಲೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಬಹುದು. ಮಧ್ಯಾಹ್ನ 1:30 ಬಳಿಕ ಯಾವುದೇ ಅಭ್ಯರ್ಥಿಗೆ ಪ್ರವೇಶ ಅವಕಾಶ ಇರುವುದಿಲ್ಲ ಎಂದು ತಿಳಿಸಲಾಯಿತು.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗುವುದು. ಬಾಲಕರು ಹಾಗೂ ಬಾಲಕಿಯರಿಗೆ ಪ್ರತ್ಯೇಕವಾಗಿ ಪ್ರಿಸ್ಕಿಂಗ್ ನಡೆಸಲಾಗುವುದು. ಬಯೋಮೆಟ್ರಿಕ್ ದೃಢೀಕರಣದ ನಂತರವೇ ಪ್ರವೇಶ ನೀಡಲಾಗುತ್ತದೆ. ಪ್ರತಿಯೊಂದು ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದು, ಸಂಪೂರ್ಣ ಪರೀಕ್ಷಾ ಪ್ರಕ್ರಿಯೆಯನ್ನು ವಿಡಿಯೋಗ್ರಫಿ ಮಾಡಲಾಗುವುದು ಎಂದು ತಿಳಿಸಿದರು.
ಪ್ರಶ್ನೆ ಪತ್ರಿಕೆಗಳು ಮತ್ತು ಓಎಂಆರ್ ಶೀಟ್‌ಗಳನ್ನು ರಾಷ್ಟ್ರೀಕೃತ ಬ್ಯಾಂಕ್‌ನಲ್ಲಿ ಭದ್ರವಾಗಿರಿಸಲಾಗುತ್ತದೆ. ಪರೀಕ್ಷೆಯ ದಿನ ಪೊಲೀಸ್ ಭದ್ರತೆಯೊಂದಿಗೆ ಕೇಂದ್ರಗಳಿಗೆ ಸಾಗಿಸಲಾಗುವುದು. ಪರೀಕ್ಷೆ ನಂತರ ಉತ್ತರ ಪತ್ರಿಕೆಗಳ ಸಂಗ್ರಹಕ್ಕೂ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ