ಬಿ.ವಿ.ವಿ. ಸಂಘದ ಬಸವೇಶ್ವರ ಕಲಾಮಹಾವಿದ್ಯಾಲಯದಲ್ಲಿ ಸರಸ್ವತಿ ಪೂಜೆ2026-27 ಶೈಕ್ಷಣಿಕ ವರ್ಷದ ಶುಭಾರಂಭ
By PetkarMedia news desk: Bagalkot
ಬಾಗಲಕೋಟೆ, ಜೂನ್ 2: ಜ್ಞಾನದ ಕಲಿಕೆ ಒಂದು ತಪಸ್ಸಿನಂತೆ. ಅದನ್ನು ಸಂಪಾದಿಸಲು ಶ್ರಮ, ಆಸಕ್ತಿ ಹಾಗೂ ನಿರಂತರ ಅಭ್ಯಾಸ ಅಗತ್ಯವಾಗಿದೆ ಎಂದು ಬಿ.ವಿ.ವಿ. ಸಂಘದ ಬಸವೇಶ್ವರ ಕಲಾ ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಆರ್. ಮೂಗನೂರಮಠ ಹೇಳಿದರು.
ಅವರು ಮಹಾವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಯಶಸ್ಸಿಗಾಗಿ ಆಯೋಜಿಸಿದ್ದ ಸರಸ್ವತಿ ಪೂಜೆ ಕಾರ್ಯಕ್ರಮದಲ್ಲಿ ಸರಸ್ವತಿ ದೇವಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯ, ಆಸಕ್ತಿ ಹಾಗೂ ಗುರಿಗೆ ಅನುಗುಣವಾಗಿ ಕಲಿಕಾ ವಿಷಯವನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ಸಾಧನೆಯ ಹಾದಿ ಸುಗಮವಾಗುತ್ತದೆ. ಶಿಕ್ಷಣವು ಕೇವಲ ಪದವಿ ಪಡೆಯುವುದಕ್ಕಲ್ಲ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳುವುದಕ್ಕೂ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಬಸವಣ್ಣನವರ ವಚನವನ್ನು ಉಲ್ಲೇಖಿಸಿದ ಅವರು, “ಕಳಬೇಡ, ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ, ತನ್ನ ಬಣ್ಣಿಸಬೇಡ, ಇದಿರ ಹಳಿಯಲು ಬೇಡ. ಇದೇ ಅಂತರಂಗ ಶುದ್ಧಿ, ಇದೇ ಬಹಿರಂಗ ಶುದ್ಧಿ, ಇದೇ ನಮ್ಮ ಕೂಡಲಸಂಗಮದೇವರನೊಲಿಸುವ ಪರಿ” ಎಂಬ ಸಂದೇಶವನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮಕ್ಕೂ ಮುನ್ನ ಬೀಳೂರು ಗುರುಬಸವ ಮಹಾಸ್ವಾಮಿಗಳಿಗೆ ಪೂಜೆ ಸಲ್ಲಿಸಲಾಯಿತು. ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯಕ್ಕೆ ಹೊಸದಾಗಿ ಪ್ರವೇಶ ಪಡೆದ ಪ್ರಥಮ ವರ್ಷದ ವಿದ್ಯಾರ್ಥಿಗಳನ್ನು ಹೂವು ನೀಡಿ ಆತ್ಮೀಯವಾಗಿ ಸ್ವಾಗತಿಸಲಾಯಿತು.
ಕಾರ್ಯಕ್ರಮದ ವೇದಿಕೆಯಲ್ಲಿ ಸಂಗೀತ ವಿಭಾಗದ ಮುಖ್ಯಸ್ಥ ಡಾ. ಕೆ.ವಿ. ಮಠ ಉಪಸ್ಥಿತರಿದ್ದರು. ಮಹಾವಿದ್ಯಾಲಯದ ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಹೊಸ ಶೈಕ್ಷಣಿಕ ವರ್ಷದ ಯಶಸ್ಸಿಗೆ ಶುಭ ಹಾರೈಸಿದರು.
ಚಿತ್ರ: ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶುಭಾರಂಭ ಅಂಗವಾಗಿ ನಡೆದ ಸರಸ್ವತಿ ಪೂಜೆ ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಎಸ್.ಆರ್. ಮೂಗನೂರಮಠ ಸೇರಿದಂತೆ ಗಣ್ಯರು ಭಾಗವಹಿಸಿದ್ದ ದೃಶ್ಯ.

ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ