ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ನ್ಯಾಯ ಒದಗಿಸಿ: ಡಿಸಿ ಸಂಗಪ್ಪ

ದೌರ್ಜನ್ಯ ಪ್ರಕರಣಗಳಿಗೆ ತ್ವರಿತ ನ್ಯಾಯ ಒದಗಿಸಿ: ಡಿಸಿ ಸಂಗಪ್ಪ

ಬಾಗಲಕೋಟೆ, ಜೂನ್ 25 ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ, ತನಿಖೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ, ನಿಯಂತ್ರಣ ಹಾಗೂ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿನ ಒಟ್ಟು 196 ದೌರ್ಜನ್ಯ ಪ್ರಕರಣಗಳ ಪೈಕಿ 46 ಪ್ರಕರಣಗಳು ಬಿಡುಗಡೆಯಾಗಿದ್ದು, 19 ಪ್ರಕರಣಗಳಲ್ಲಿ ಶಿಕ್ಷೆ ವಿಧಿಸಲಾಗಿದೆ. 83 ಪ್ರಕರಣಗಳು ವಿಲೇವಾರಿಯಾಗಿದ್ದು, ಇನ್ನೂ 113 ಪ್ರಕರಣಗಳು ನ್ಯಾಯಾಲಯದಲ್ಲಿ ಬಾಕಿ ಉಳಿದಿವೆ ಎಂದು ಮಾಹಿತಿ ನೀಡಿದರು.

2025-26ನೇ ಸಾಲಿನಲ್ಲಿ 73 ಹಾಗೂ 2026-27ನೇ ಸಾಲಿನಲ್ಲಿ 25 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ದೌರ್ಜನ್ಯ ಸಂತ್ರಸ್ತರಿಗೆ ಕಳೆದ ಸಾಲಿನಲ್ಲಿ ಒಟ್ಟು 1.28 ಕೋಟಿ ರೂ. ಪರಿಹಾರ ವಿತರಿಸಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.

ಸಭೆಯಲ್ಲಿ ಮಾತನಾಡಿದ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನಿಗಮಗಳ ಮೂಲಕ ಬೋರ್‌ವೆಲ್ ಕಾಮಗಾರಿಗಳು ನಡೆಯದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ರಾಜ್ಯ ಮಟ್ಟದಲ್ಲಿ ಟೆಂಡರ್ ಆಗಿಲ್ಲ ಎಂಬ ಕಾರಣ ನೀಡಿ ಅಧಿಕಾರಿಗಳು ಕೈಕಟ್ಟಿ ಕುಳಿತುಕೊಳ್ಳದೆ, ಯೋಜನೆಗಳ ಅನುಷ್ಠಾನಕ್ಕಾಗಿ ಮೇಲ್ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸಬೇಕು ಎಂದು ಸಲಹೆ ನೀಡಿದರು.

ಬಾಗಲಕೋಟೆ ಶಾಸಕ ಉಮೇಶ ಮೇಟಿ ಅವರು ಎಸ್‌ಸಿ/ಎಸ್‌ಟಿ ಕಾಲೋನಿಗಳಲ್ಲಿ ಸ್ಮಶಾನಗಳ ಕೊರತೆಯ ವಿಚಾರ ಪ್ರಸ್ತಾಪಿಸಿದರು. ಈ ಕುರಿತು ಜಿಲ್ಲಾಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆ, ತಹಶೀಲ್ದಾರರು, ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಮನ್ವಯದೊಂದಿಗೆ ಅಗತ್ಯ ಸ್ಥಳಗಳ ಪಟ್ಟಿಯನ್ನು ಸಿದ್ಧಪಡಿಸಿ ಸ್ಮಶಾನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಸಭೆಯಲ್ಲಿ ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನದ ಸಮರ್ಪಕ ಬಳಕೆ, ಡಕ್ಕಲಿಗ ಸಮುದಾಯದವರಿಗೆ ನಿವೇಶನ ಮಂಜೂರು, ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ, ಚರಂಡಿ ಸಮಸ್ಯೆ ಹಾಗೂ ಜಮೀನುಗಳಿಗೆ ರಸ್ತೆ ಸಂಪರ್ಕ ಸೇರಿದಂತೆ ಹಲವು ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು.

ಕಾಮೆಂಟ್‌ಗಳು