ಬಾಗಲಕೋಟೆ: ಬಿಸಿಯೂಟ ಸೇವಿಸಿದ ಬಳಿಕ 12 ವಿದ್ಯಾರ್ಥಿಗಳು ಅಸ್ವಸ್ಥ!

 ಬಾಗಲಕೋಟೆ: ಬಿಸಿಯೂಟ ಸೇವಿಸಿದ ಬಳಿಕ 12 ವಿದ್ಯಾರ್ಥಿಗಳು ಅಸ್ವಸ್ಥ; ಆರೋಗ್ಯ ಸ್ಥಿರ, ಜಿಲ್ಲಾಡಳಿತದಿಂದ ಅಗತ್ಯ ಕ್ರಮ

ಬಾಗಲಕೋಟೆ ಜಿಲ್ಲೆಯ ಮುಗಳಖೋಡದ (ಮಾಲಾಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿ) ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ ಸೇವಿಸಿದ ಬಳಿಕ 12 ವಿದ್ಯಾರ್ಥಿಗಳಲ್ಲಿ ವಾಂತಿ ಹಾಗೂ ಅತಿಸಾರದ ಲಕ್ಷಣಗಳು ಕಾಣಿಸಿಕೊಂಡಿವೆ.



ಅಸ್ವಸ್ಥರಾದ ಮಕ್ಕಳಲ್ಲಿ 9 ಮಂದಿಯನ್ನು ಮುಧೋಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ನಿರ್ಜಲೀಕರಣ (ಡಿಹೈಡ್ರೇಶನ್) ಕಂಡುಬಂದ ಹಿನ್ನೆಲೆಯಲ್ಲಿ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾಧಿಕಾರಿ ಸಂಗಪ್ಪ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಜಾನನ ಬಾಲೆ ಅವರು ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರಿಂದ ಮಕ್ಕಳ ಆರೋಗ್ಯದ ಕುರಿತು ಮಾಹಿತಿ ಪಡೆದರು. ಎಲ್ಲಾ ಮಕ್ಕಳಿಗೆ ಉತ್ತಮ ಚಿಕಿತ್ಸೆ ಹಾಗೂ ಅಗತ್ಯ ಆರೈಕೆ ಒದಗಿಸುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕರಿಗೆ ಸೂಚನೆ ನೀಡಿದರು.

ಮುಧೋಳ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಕೂಡ ಅಧಿಕಾರಿಗಳೊಂದಿಗೆ ಮಾತನಾಡಿ ಮಕ್ಕಳಿಗೆ ತುರ್ತು ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದ್ದಾರೆ.

ಘಟನೆಯ ನಿಖರ ಕಾರಣ ಪತ್ತೆಹಚ್ಚಲು ತನಿಖಾ ಸಮಿತಿಯನ್ನು ರಚಿಸಲಾಗಿದ್ದು, ಆರೋಗ್ಯ ಇಲಾಖೆಯ ತಂಡ ಗ್ರಾಮಕ್ಕೆ ಭೇಟಿ ನೀಡಿ ಶಾಲೆಯ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ, ಅಗತ್ಯ ಚಿಕಿತ್ಸೆ ಹಾಗೂ ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದೆ.

ಪಾಲಕರು ಆತಂಕಪಡುವ ಅಗತ್ಯವಿಲ್ಲ ಎಂದು ಜಿಲ್ಲಾಡಳಿತ ಮನವಿ ಮಾಡಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ ಎಂದು ತಿಳಿಸಿದೆ.

ಇದೇ ವೇಳೆ ಮುಧೋಳ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಅಜೀತ ಮನ್ನಿಕೇರಿ ಅವರು ಮಕ್ಕಳ ಆರೋಗ್ಯ ವಿಚಾರಿಸಿ, ಎಲ್ಲ ಮಕ್ಕಳು ಸಹಜ ಸ್ಥಿತಿಯಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಕಾಮೆಂಟ್‌ಗಳು