ಸಾಮಾಜಿಕ ನ್ಯಾಯಕ್ಕಾಗಿ ಬೀಳಗಿಯಲ್ಲಿ ಬೃಹತ್ ಕಾಲ್ನಡಿಗೆ ಪ್ರತಿಭಟನೆ

ಬೀಳಗಿ: ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಸಮುದಾಯಗಳ ಮುಖಂಡರು, ಯುವಕರು, ರೈತರು ಹಾಗೂ ಸಾರ್ವಜನಿಕರು ಪಟ್ಟಣದಲ್ಲಿ ಬೃಹತ್ ಕಾಲ್ನಡಿಗೆ ಪ್ರತಿಭಟನೆ ನಡೆಸಿದರು.




ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತಂದರು.

ಬಳಿಕ ತಹಶೀಲ್ದಾರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು. ಸಾಮಾಜಿಕ ನ್ಯಾಯದ ತತ್ವಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಜಾತಿ ಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಯನ್ನು ಜಾರಿಗೊಳಿಸಬೇಕು ಹಾಗೂ ಮುಸ್ಲಿಂ ಸಮುದಾಯದ 2ಬಿ ಮೀಸಲಾತಿಯನ್ನು ಮರುಸ್ಥಾಪಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಅಲ್ಲದೆ, ಖಾಲಿ ಇರುವ ಸರ್ಕಾರಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡಬೇಕು, ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಅನುಸೂಚಿಗೆ ಸೇರಿಸಬೇಕು ಹಾಗೂ ಶೋಷಿತ ಸಮುದಾಯಗಳ ಹಕ್ಕುಗಳನ್ನು ಸಂರಕ್ಷಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.

ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಿರಂತರವಾಗಿ ಮುಂದುವರಿಯಲಿದ್ದು, ಜನರ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಶೀಘ್ರ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾಮೆಂಟ್‌ಗಳು