ಕಾಂಗ್ರೆಸ್ ಗೂಂಡಾಗಿರಿ ಖಂಡಿಸಿ ಬಾಗಲಕೋಟೆಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ

ಬಾಗಲಕೋಟೆ: ಕಾಂಗ್ರೆಸ್‌ನ ಗೂಂಡಾಗಿರಿ ಹಾಗೂ ದೇಶವಿರೋಧಿ ಚಟುವಟಿಕೆಗಳನ್ನು ಖಂಡಿಸಿ ಭಾರತೀಯ ಜನತಾ ಪಾರ್ಟಿ ಬಾಗಲಕೋಟೆ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ನವನಗರದ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.



ನವನಗರದಲ್ಲಿರುವ ಬಿಜೆಪಿ ಜಿಲ್ಲಾ ಕಾರ್ಯಾಲಯದಿಂದ ಜಿಲ್ಲಾಡಳಿತ ಭವನದವರೆಗೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆ ನಡೆಸಿ, ಕಾಂಗ್ರೆಸ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಬಳಿಕ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವೀರಣ್ಣ ಚರಂತಿಮಠ, ದೆಹಲಿಯಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

“ದೆಹಲಿಯಲ್ಲಿ ನಡೆಯುತ್ತಿರುವ ಘಟನೆಗಳನ್ನು ಮಾಧ್ಯಮಗಳ ಮೂಲಕ ದೇಶದ ಜನರು ನೋಡುತ್ತಿದ್ದಾರೆ. ಕಾಂಗ್ರೆಸ್‌ಗೆ ರಾಜಕೀಯ ವೇದಿಕೆ ಸಿಗದ ಕಾರಣ ಇಂತಹ ಪ್ರತಿಭಟನೆಗಳಿಗೆ ಬೆಂಬಲ ನೀಡುತ್ತಿದೆ” ಎಂದು ಆರೋಪಿಸಿದರು.

ಸೋನಮ್ ವಾಂಗ್ಚುಕ್ ಅವರ ಪ್ರತಿಭಟನೆಯ ಕುರಿತು ಮಾತನಾಡಿದ ಅವರು, “ಪ್ರತಿಭಟನೆಯಲ್ಲಿ ಗೂಂಡಾಗಳು ಸೇರಿಕೊಂಡಿದ್ದಾರೆ ಎಂದು ಆರೋಪಿಸಿ ವಾಂಗ್ಚುಕ್ ಅವರ ಪತ್ನಿ ಪ್ರತಿಭಟನೆಯಿಂದ ಹಿಂದೆ ಸರಿಯುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ವಾಂಗ್ಚುಕ್ ಅವರನ್ನು ಭೇಟಿ ಮಾಡಿದ ನಂತರ ಪ್ರತಿಭಟನೆ ಹಿಂಪಡೆಯಲಾಗುತ್ತಿದೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಬರುತ್ತಿದೆ” ಎಂದು ಹೇಳಿದರು.

ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯ ಪಿ.ಎಚ್. ಪೂಜಾರ, ಮಾಜಿ ಶಾಸಕ ವೀರಣ್ಣ ಚರಂತಿಮಠ ಸೇರಿದಂತೆ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳು