ಗುರುಪೂರ್ಣಿಮೆ ಆಚರಣೆ: “ಗುರುವಿನ ಸ್ಥಾನವನ್ನು ಎಐಯೂ ತುಂಬಲು ಸಾಧ್ಯವಿಲ್ಲ”

ಗುರುಪೂರ್ಣಿಮೆ ಆಚರಣೆ: “ಗುರುವಿನ ಸ್ಥಾನವನ್ನು ಎಐಯೂ ತುಂಬಲು ಸಾಧ್ಯವಿಲ್ಲ”

ಬಾಗಲಕೋಟೆ: ಆಧುನಿಕ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ವೇಗವಾಗಿ ಬೆಳೆಯುತ್ತಿದ್ದರೂ, ಗುರುವಿನ ಸ್ಥಾನವನ್ನು ಯಾವುದೇ ತಂತ್ರಜ್ಞಾನವೂ ತುಂಬಲು ಸಾಧ್ಯವಿಲ್ಲ ಎಂದು ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜೆ.ವಿ. ಚವ್ಹಾಣ ಹೇಳಿದರು.

ಬಿ.ವಿ.ವಿ. ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ, ಭಾರತೀಯ ಶಿಕ್ಷಣ ಮಂಡಳಿ, ಬಾಗಲಕೋಟೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಗುರುಪೂರ್ಣಿಮೆ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಗುರುಗಳು ಕೇವಲ ಪಠ್ಯ ವಿಷಯ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಮಾರ್ಗದರ್ಶಕರಾಗಿದ್ದಾರೆ. ಜ್ಞಾನ, ಶಿಸ್ತು, ಮೌಲ್ಯಗಳು ಹಾಗೂ ಉತ್ತಮ ಸಂಸ್ಕಾರ ಬೆಳೆಸುವಲ್ಲಿ ಗುರುವಿನ ಪಾತ್ರ ಮಹತ್ತರವಾಗಿದೆ ಎಂದು ಹೇಳಿದರು.

ಭಾರತೀಯ ಶಿಕ್ಷಣ ಮಂಡಳಿಯ ಅಧ್ಯಕ್ಷ ಎಸ್.ಆರ್. ಮನಹಳ್ಳಿ ಮಾತನಾಡಿ, ಹೆಣ್ಣುಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಸಂಸ್ಕಾರ ಹಾಗೂ ಮೌಲ್ಯಗಳನ್ನು ಬೆಳೆಸುವುದು ಅಗತ್ಯ. ಶಿಕ್ಷಣವು ಕೇವಲ ಉದ್ಯೋಗ ಪಡೆಯುವ ಸಾಧನವಲ್ಲ; ವ್ಯಕ್ತಿತ್ವವನ್ನು ಪರಿಪೂರ್ಣಗೊಳಿಸುವ ಅವಕಾಶವಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಾವಿದ್ಯಾಲಯದ ಪ್ರಾಚಾರ್ಯ ಶ್ರೀಮತಿ ಎಸ್.ಜೆ. ಒಡೆಯರ ಮಾತನಾಡಿ, ಗುರು-ಶಿಷ್ಯ ಪರಂಪರೆ ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿದ್ದು, ವಿದ್ಯಾರ್ಥಿಗಳು ಜ್ಞಾನಾರ್ಜನೆಯ ಜೊತೆಗೆ ಸಂಸ್ಕಾರ, ಶಿಸ್ತು ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

ವಿದ್ಯಾರ್ಥಿನಿ ಕುಮಾರಿ ಸೌಜನ್ಯ ಪೂಜಾರ ಮಾತನಾಡಿ, ವಿದ್ಯಾರ್ಥಿನಿಯರಲ್ಲಿ ಅಡಗಿರುವ ಕೌಶಲ್ಯ ಮತ್ತು ಸಾಮರ್ಥ್ಯವನ್ನು ಗುರುತಿಸಿ ಬೆಳೆಸುವ ಶಕ್ತಿ ಗುರುವಿಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಭಾರತೀಯ ಶಿಕ್ಷಣ ಮಂಡಳಿಯ ಉಪಾಧ್ಯಕ್ಷೆ ಡಾ. ವಿಜಯಲಕ್ಷ್ಮಿ ಪಿ. ಹೊಸಕೇರಿ, ಕಾರ್ಯದರ್ಶಿ ಶ್ರೀ ಲಿಂಗರಾಜ ವೈದ್ಯ ಸೇರಿದಂತೆ ಮಹಾವಿದ್ಯಾಲಯದ ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು