ಬಾಗಲಕೋಟೆ, ಆಗಸ್ಟ್ 05:ಬಾಗಲಕೋಟೆ ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯನ್ನು ನೂತನ ಸಚಿವ ವಿಜಯಾನಂದ ಕಾಶಪ್ಪನವರ ಇಂದು ಪರಿಶೀಲಿಸಿದರು.
ಇಳಕಲ್ಲ, ಗುಳೇದಗುಡ್ಡ ಹಾಗೂ ಬಾಗಲಕೋಟೆ ತಾಲೂಕಿನ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಭೇಟಿ ನೀಡಿದ ಸಚಿವರು, ಮಳೆಯ ಕೊರತೆಯಿಂದ ಹಾನಿಗೊಳಗಾದ ತೊಗರಿ, ಹೆಸರು, ಸೂರ್ಯಕಾಂತಿ, ಸಜ್ಜೆ, ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗಳನ್ನು ವೀಕ್ಷಿಸಿ ರೈತರ ಸಮಸ್ಯೆಗಳನ್ನು ಆಲಿಸಿದರು.
ಮಳೆಯ ಅಭಾವದಿಂದ ಬೆಳೆಗಳಿಗೆ ಉಂಟಾಗಿರುವ ನಷ್ಟದ ಕುರಿತು ರೈತರಿಂದ ಮಾಹಿತಿ ಪಡೆದ ಸಚಿವರು, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಮಳೆ ಕೊರತೆಯ ಸಂದರ್ಭದಲ್ಲಿ ರೈತರಿಗೆ ಬೆಳೆ ನಿರ್ವಹಣೆ, ಪರ್ಯಾಯ ಬೆಳೆ ಹಾಗೂ ನಷ್ಟ ತಗ್ಗಿಸುವ ಕುರಿತು ಸೂಕ್ತ ತಾಂತ್ರಿಕ ಸಲಹೆ ನೀಡುವಂತೆ ಸೂಚಿಸಿದರು.
ಬೆಳೆ ವಿಮೆ ಯೋಜನೆಯಡಿ ನೋಂದಣಿಯಾಗಿರುವ ರೈತರ ಮಾಹಿತಿ ಪಡೆದ ಅವರು, ಅರ್ಹ ರೈತರಿಗೆ ವಿಮೆ ಸೌಲಭ್ಯ ದೊರೆಯುವಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಹಾನಿಗೊಳಗಾದ ಬೆಳೆಗಳ ಕುರಿತು ಸಮಗ್ರ ಸಮೀಕ್ಷೆ ನಡೆಸಿ, ರೈತರಿಗೆ ಸೂಕ್ತ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಎರಡು ದಿನಗಳೊಳಗೆ ವಿಸ್ತೃತ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವಂತೆ ಸಚಿವ ವಿಜಯಾನಂದ ಕಾಶಪ್ಪನವರ ಅಧಿಕಾರಿಗಳಿಗೆ ಸೂಚಿಸಿದರು.
ಪರಿಶೀಲನೆ ವೇಳೆ ಬಾದಾಮಿ ಶಾಸಕ ಭೀಮಸೇನ ಚಿಮ್ಮನಕಟ್ಟಿ, ಬಾಗಲಕೋಟೆ ಶಾಸಕ ಉಮೇಶ ಮೇಟಿ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್ ಸೇರಿದಂತೆ ಕೃಷಿ, ತೋಟಗಾರಿಕೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಚಿವ ವಿಜಯಾನಂದ ಕಾಶಪ್ಪನವರ ಹೇಳಿಕೆ:
“ಮುಖ್ಯಮಂತ್ರಿಗಳ ಸೂಚನೆಯಂತೆ ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಉಂಟಾಗಿರುವ ಬೆಳೆ ಹಾನಿ ಹಾಗೂ ಬರ ಪರಿಸ್ಥಿತಿಯನ್ನು ಪರಿಶೀಲಿಸಲಾಗುತ್ತಿದೆ. ಪರಿಶೀಲನೆಯ ಮಾಹಿತಿ ಮತ್ತು ಅಧಿಕಾರಿಗಳ ವರದಿಗಳ ಆಧಾರದ ಮೇಲೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು. ವರದಿಯ ಆಧಾರದ ಮೇಲೆ ರೈತರಿಗೆ ಸೂಕ್ತ ಪರಿಹಾರ ಒದಗಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ.”



ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ