ಯುವಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯದ ಅರಿವು ಅಗತ್ಯ: ಕಾಶಪ್ಪನವರ

ಯುವಜನರಲ್ಲಿ ಪ್ರಜಾಪ್ರಭುತ್ವದ ಮೌಲ್ಯದ ಅರಿವು ಅಗತ್ಯ: ಕಾಶಪ್ಪನವರ

ಬಾಗಲಕೋಟೆ: ಯುವಜನರಲ್ಲಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರ ಹೇಳಿದರು.



ನಗರದ ಜಿಲ್ಲಾ ಪಂಚಾಯಿತಿ ನೂತನ ಸಭಾಭವನದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ 19ನೇ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ, ಯುವ ಸಂಸತ್ತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ಮೂಲ ಆಶಯಗಳಾದ ಸೌಹಾರ್ದತೆ, ಸಮಾನತೆ, ಸ್ವಾತಂತ್ರ್ಯ ಹಾಗೂ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಬೇಕು. ಪ್ರತಿಯೊಬ್ಬ ನಾಗರಿಕನ ಹಕ್ಕುಗಳನ್ನು ಗೌರವಿಸುವುದರೊಂದಿಗೆ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದರು.

ಯುವ ಸಂಸತ್‌ಗಳ ಮೂಲಕ ವಿದ್ಯಾರ್ಥಿಗಳು ಹಾಗೂ ಯುವಕರಿಗೆ ಸಂವಿಧಾನ, ಮೂಲಭೂತ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದ ಆಶಯಗಳ ಕುರಿತು ಅರಿವು ಮೂಡಿಸಲಾಗುತ್ತಿದೆ. ಶಾಸಕಾಂಗ, ನ್ಯಾಯಾಂಗ ಹಾಗೂ ಕಾರ್ಯಾಂಗದ ಕಾರ್ಯವೈಖರಿ, ಲೋಕಸಭೆ, ರಾಜ್ಯಸಭೆ, ವಿಧಾನಸಭೆ ಮತ್ತು ವಿಧಾನಪರಿಷತ್‌ಗಳ ಕಲಾಪ, ಚರ್ಚೆ ಹಾಗೂ ಕಾನೂನು ರೂಪಿಸುವ ಪ್ರಕ್ರಿಯೆಗಳ ಬಗ್ಗೆ ಯುವಕರು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು

ಯುವಜನತೆ ದೇಶದ ಭವಿಷ್ಯದ ಶಕ್ತಿಯಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತು ಜವಾಬ್ದಾರಿಯುತ ನಾಗರಿಕರಾಗಿ ರೂಪುಗೊಳ್ಳಬೇಕು. ಸಮಾಜದಲ್ಲಿ ಸೌಹಾರ್ದತೆ, ಸಹಬಾಳ್ವೆ ಹಾಗೂ ಪರಸ್ಪರ ಗೌರವದ ಮನೋಭಾವ ಬೆಳೆಸುವುದು ಪ್ರಜಾಪ್ರಭುತ್ವದ ಪ್ರಮುಖ ಉದ್ದೇಶವಾಗಿದೆ ಎಂದರು.

ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ ಮಾತನಾಡಿ, ಸಂವಿಧಾನ ನೀಡಿರುವ ಹಕ್ಕುಗಳ ಜೊತೆಗೆ ನಾಗರಿಕರ ಕರ್ತವ್ಯಗಳ ಬಗ್ಗೆಯೂ ಅರಿವು ಮೂಡಬೇಕು. ಸಮಾನತೆ, ಸ್ವಾತಂತ್ರ್ಯ, ಶಿಕ್ಷಣ ಮತ್ತು ಅಭಿವೃದ್ಧಿ ಸೇರಿದಂತೆ ಸಂವಿಧಾನಾತ್ಮಕ ಹಕ್ಕುಗಳನ್ನು ತಿಳಿದುಕೊಳ್ಳುವಷ್ಟೇ ಕರ್ತವ್ಯಗಳ ಬಗ್ಗೆಯೂ ಅರಿವು ಹೊಂದುವುದು ಅಗತ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಉಮೇಶ ಮೇಟಿ ಮಾತನಾಡಿ, ಸಂವಿಧಾನದ ಆಶಯ ಕೇವಲ ಕಾನೂನು ಪುಸ್ತಕಗಳಿಗೆ ಸೀಮಿತವಾಗದೆ ಪ್ರತಿಯೊಬ್ಬರ ಜೀವನ ಹಾಗೂ ಸಾಮಾಜಿಕ ನಡವಳಿಕೆಯಲ್ಲಿ ಅಳವಡಿಕೆಯಾಗಬೇಕು. ಜಾತಿ, ಧರ್ಮ, ಭಾಷೆ, ಲಿಂಗ ಹಾಗೂ ಆರ್ಥಿಕ ಸ್ಥಿತಿ ಸೇರಿದಂತೆ ಯಾವುದೇ ಆಧಾರದ ಮೇಲೆ ಮೇಲು-ಕೀಳು ಭಾವನೆ ಇರಬಾರದು. ಸಮಾನತೆ, ಸಹೋದರತ್ವ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮೌಲ್ಯಗಳು ಬಲಗೊಳ್ಳಬೇಕು ಎಂದರು.

ಕಟಗೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಡಾ. ಈರಣ್ಣ ಕುಡಕಿ ಅತಿಥಿ ಉಪನ್ಯಾಸ ನೀಡಿದರು. ಶಿರೂರಿನ ಡಾ. ಬಸಲಿಂಗ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಕಾರ್ಯಕ್ರಮದ ಮುನ್ನ ಜಿಲ್ಲಾಡಳಿತ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಸಚಿವ ವಿಜಯಾನಂದ ಕಾಶಪ್ಪನವರ ಮಾಲಾರ್ಪಣೆ ಮಾಡಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನೀಲಕುಮಾರ ದಡ್ಡಿ, ಬುಡಾ ಅಧ್ಯಕ್ಷ ಅಬ್ದುಲರಜಾಕ ಬೇನೂರ, ಜಿಲ್ಲಾಧಿಕಾರಿ ಸಂಗಪ್ಪ, ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ, ಉಪ ವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾಮೆಂಟ್‌ಗಳು