ಪಶುಗಳ ಆರೋಗ್ಯಕ್ಕೆ ಆದ್ಯತೆ ನೀಡಿ: ಗಜಾನನ ಬಾಲೆ

ಪಶುಗಳ ಆರೋಗ್ಯಕ್ಕೆ ಆದ್ಯತೆ ನೀಡಿ: ಗಜಾನನ ಬಾಲೆ

ಬಾಗಲಕೋಟೆ, ಸೆ.17: ಜಿಲ್ಲೆಯ ಜಾನುವಾರುಗಳ ಆರೋಗ್ಯ ಸಂರಕ್ಷಣೆ ಹಾಗೂ ರೈತರಿಗೆ ಗುಣಮಟ್ಟದ ಪಶುವೈದ್ಯಕೀಯ ಸೇವೆ ಒದಗಿಸುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಸೂಚಿಸಿದರು.


ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ನಡೆದ ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಶು ಪಾಲನೆ ಗ್ರಾಮೀಣ ಆರ್ಥಿಕತೆಯ ಪ್ರಮುಖ ಆಧಾರವಾಗಿದ್ದು, ರೈತರು ಹಾಗೂ ಪಶುಪಾಲಕರ ಆದಾಯ ಹೆಚ್ಚಳಕ್ಕೆ ಪೂರಕವಾಗುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಯೋಜನೆಗಳ ಸೌಲಭ್ಯಗಳು ಫಲಾನುಭವಿಗಳಿಗೆ ಸಕಾಲದಲ್ಲಿ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.

ಜಾನುವಾರುಗಳಲ್ಲಿ ಕಂಡುಬರುವ ಚರ್ಮಗಂಟು ರೋಗ, ಕಾಲು ಮತ್ತು ಬಾಯಿ ರೋಗ, ಕರಳು ಬೇನೆ ಸೇರಿದಂತೆ ವಿವಿಧ ಕಾಯಿಲೆಗಳ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದರು. ರೋಗಗಳ ಪ್ರಮಾಣ ಹೆಚ್ಚಿರುವ ಪ್ರದೇಶಗಳ ತಾಲೂಕುವಾರು ಹಾಗೂ ಪ್ರದೇಶವಾರು ಸಮಗ್ರ ಪಟ್ಟಿಯನ್ನು ಸಿದ್ಧಪಡಿಸಿ, ಅಗತ್ಯವಿರುವ ಕಡೆಗಳಲ್ಲಿ ರ‍್ಯಾಂಡಮ್ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ಪಶು ಆಸ್ಪತ್ರೆಗಳಿಗೆ ಬರುವ ರೈತರಿಗೆ ಉತ್ತಮ ಸ್ಪಂದನೆ ನೀಡಬೇಕು. ಮನುಷ್ಯರ ಜೀವ ಎಷ್ಟು ಮುಖ್ಯವೋ, ಪ್ರಾಣಿಗಳ ಜೀವವೂ ಅಷ್ಟೇ ಮುಖ್ಯ. ಇದ್ದಲಗಿ ಗ್ರಾಮದಲ್ಲಿ ಇತ್ತೀಚೆಗೆ ಅಗ್ನಿ ಅವಘಡದಲ್ಲಿ ಕರುಗಳು ಮೃತಪಟ್ಟಿರುವ ಘಟನೆ ನೋವು ತಂದಿದೆ. ಪ್ರಾಣಿಗಳನ್ನು ಯಾವುದೇ ಕಾರಣಕ್ಕೂ ಹಗುರವಾಗಿ ಪರಿಗಣಿಸಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪಶು ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳನ್ನು ಸಮರ್ಪಕವಾಗಿ ದಾಸ್ತಾನು ಮಾಡಿಕೊಂಡು, ಅವುಗಳ ಲಭ್ಯತೆಯನ್ನು ನಿರಂತರವಾಗಿ ಪರಿಶೀಲಿಸಬೇಕು. ಆಸ್ಪತ್ರೆ ಆವರಣ ಹಾಗೂ ಚಿಕಿತ್ಸಾ ಸ್ಥಳಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಲಭ್ಯವಿರುವ ಸಂಪನ್ಮೂಲಗಳೊಂದಿಗೆ ತಕ್ಷಣ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಪಶು ಸಖಿಯರ ಕರ್ತವ್ಯ ಹಾಗೂ ಜವಾಬ್ದಾರಿಗಳ ಕುರಿತು ಮಾಹಿತಿ ಪಡೆದ ಸಿಇಒ, ಮುಂದಿನ ತಿಂಗಳಲ್ಲಿ ಪಶು ಸಖಿಯರಿಗೆ ಅಗತ್ಯ ತರಬೇತಿ ಆಯೋಜಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮೀಣ ಪ್ರದೇಶಗಳಲ್ಲಿ ಜಾನುವಾರುಗಳ ಆರೋಗ್ಯದ ಕುರಿತು ರೈತರಿಗೆ ಅರಿವು ಮೂಡಿಸುವಲ್ಲಿ ಪಶು ಸಖಿಯರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು ಎಂದರು.

ತಾಲೂಕುವಾರು ಅಧಿಕಾರಿಗಳ ಸಮಸ್ಯೆಗಳನ್ನು ಆಲಿಸಿದ ಅವರು, ಜಿಲ್ಲೆಯ ಹಲವು ಕಡೆಗಳಲ್ಲಿ ಸಿಬ್ಬಂದಿ ಕೊರತೆ ಇರುವುದನ್ನು ಗಮನಿಸಿದರು. ಬೀಳಗಿ ತಾಲೂಕಿನಲ್ಲಿ ಸಿಬ್ಬಂದಿ ಕೊರತೆ ಹೆಚ್ಚಿರುವುದರಿಂದ, ಕೊರತೆ ನೀಗಿಸಲು ಕೇಂದ್ರ ಕಚೇರಿಗೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.

ಸಭೆಯಲ್ಲಿ ಪಶು ಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಎಸ್.ಎಚ್. ಕರಡಿಗುಡ್ಡ, ಪಾಲಿಕ್ಲಿನಿಕ್ ಉಪ ನಿರ್ದೇಶಕ ಶಿವಕುಮಾರ ಹೊಳೆಪ್ಪಗೋಳ ಸೇರಿದಂತೆ ವಿವಿಧ ತಾಲೂಕುಗಳ ಪಶುವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.

ಕಾಮೆಂಟ್‌ಗಳು