ಅರ್ಹ ರೈತರಿಗೆ ₹5 ಲಕ್ಷದವರೆಗೆ ಶೂನ್ಯ ಬಡ್ಡಿದರದಲ್ಲಿ ಬೆಳೆ ಸಾಲ ಬಿಡುಗಡೆಗೆ ಒತ್ತಾಯ
ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್‌ನಲ್ಲಿ ನಡೆಯುತ್ತಿದೆ ಎನ್ನಲಾದ ಸ್ವಜನಪಕ್ಷಪಾತ, ದುರಾಡಳಿತ ಹಾಗೂ ಭ್ರಷ್ಟಾಚಾರದ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ಅರ್ಹ ರೈತರಿಗೆ ತಕ್ಷಣ ಸಾಲ ಸೌಲಭ್ಯ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ನವನಗರದಲ್ಲಿರುವ ಡಿಸಿಸಿ ಬ್ಯಾಂಕ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ರೈತರು, ಬ್ಯಾಂಕ್ ಆಡಳಿತದಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರಬೇಕು. ಬ್ಯಾಂಕ್‌ನಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮಗಳ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ, ತಪ್ಪಿತಸ್ಥರು ಕಂಡುಬಂದಲ್ಲಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕೃಷಿ, ಪಶುಪಾಲನೆ ಹಾಗೂ ಕುರಿ ಸಾಕಾಣಿಕೆಯನ್ನೇ ಜೀವನಾಧಾರವಾಗಿಸಿಕೊಂಡಿರುವ ಜಿಲ್ಲೆಯ ರೈತರಿಗೆ ಸಕಾಲದಲ್ಲಿ ಸಾಲ ಸೌಲಭ್ಯ ದೊರೆಯುವುದು ಅತ್ಯಗತ್ಯವಾಗಿದೆ. ಸರ್ಕಾರದ ಆದೇಶದಂತೆ ಅರ್ಹ ರೈತರಿಗೆ ಯಾವುದೇ ವಿಳಂಬವಿಲ್ಲದೆ ಶೂನ್ಯ ಬಡ್ಡಿದರದಲ್ಲಿ ₹5 ಲಕ್ಷದವರೆಗೆ ಬೆಳೆ ಸಾಲ ನೀಡಬೇಕು. ಸಾಲ ಪಡೆಯಲು ರೈತರು ಎದುರಿಸುತ್ತಿರುವ ಅನಗತ್ಯ ತೊಂದರೆಗಳನ್ನು ನಿವಾರಿಸಬೇಕು ಎಂದು ಆಗ್ರಹಿಸಿದರು.
ಅಲ್ಲದೆ, ಪಶುಪಾಲನೆ ಹಾಗೂ ಕುರಿ ಸಾಕಾಣಿಕೆಯನ್ನು ನಂಬಿಕೊಂಡಿರುವ ರೈತರು ಮತ್ತು ಕುರಿಗಾಹಿಗಳಿಗೆ ಮಂಜೂರಾಗಬೇಕಾದ ಸಾಲವನ್ನು ವಿಳಂಬವಿಲ್ಲದೆ ಬಿಡುಗಡೆ ಮಾಡಬೇಕು. ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ತಲುಪುವಂತೆ ಸರ್ಕಾರ ಹಾಗೂ ಬ್ಯಾಂಕ್ ಆಡಳಿತ ಮಂಡಳಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಮನವಿ ಮೂಲಕ ಒತ್ತಾಯಿಸಿದರು.


ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ