ಬರ ಪರಿಸ್ಥಿತಿ: ಕುಡಿಯುವ ನೀರು, ಮೇವು ಸಂಗ್ರಹಕ್ಕೆ ಆದ್ಯತೆ
ಬಾದಾಮಿ: ಜನರು ಹಾಗೂ ಜಾನುವಾರುಗಳಿಗೆ ಯಾವುದೇ ಕಾರಣಕ್ಕೂ ಕುಡಿಯುವ ನೀರಿನ ಕೊರತೆ ಉಂಟಾಗದಂತೆ ಅಗತ್ಯ ನೀರು ಸಂಗ್ರಹಿಸಿ, ಸಮರ್ಪಕ ನಿರ್ವಹಣೆ ಮಾಡಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ತಾ.ಪಂ. ಸಭಾಭವನದಲ್ಲಿ ಮಂಗಳವಾರ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ನಡೆದ ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ನೀರಿನ ಸಂಗ್ರಹ, ನಿರ್ವಹಣೆ ಹಾಗೂ ಮುಂಜಾಗ್ರತಾ ಕ್ರಮಗಳಿಗೆ ಆದ್ಯತೆ ನೀಡಬೇಕು. ಜಾನುವಾರುಗಳಿಗೆ ಅಗತ್ಯ ಮೇವು ಮತ್ತು ಕುಡಿಯುವ ನೀರಿನ ವ್ಯವಸ್ಥೆಯನ್ನು ಮುಂಚಿತವಾಗಿಯೇ ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
ಮಳೆ ಕೊರತೆಯ ನಡುವೆಯೂ ರೈತರಿಗೆ ತೊಂದರೆಯಾಗದಂತೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಹೆಸ್ಕಾಂ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
ತಹಶೀಲ್ದಾರ್ ಹಾಗೂ ತಾ.ಪಂ. ಇಒ ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಸ್ಥಳೀಯ ಪರಿಸ್ಥಿತಿ ಪರಿಶೀಲಿಸಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಜನರಲ್ಲಿ ನೀರಿನ ಸಂರಕ್ಷಣೆ ಮತ್ತು ಮುಂಜಾಗ್ರತಾ ಕ್ರಮಗಳ ಕುರಿತು ಅರಿವು ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.
ಬರ ಪರಿಸ್ಥಿತಿಯಲ್ಲಿ ಜನರು, ರೈತರು ಹಾಗೂ ಜಾನುವಾರುಗಳ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಿ, ಯಾವುದೇ ಸಮಸ್ಯೆ ಎದುರಾದರೂ ತಕ್ಷಣ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಅಮರೇಶ ಪಮ್ಮಾರ, ತಾ.ಪಂ. ಇಒ ಸತೀಶ ಮಾಕೊಂಡ ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
*******************
“ಜನರ ಸಂಕಷ್ಟಕ್ಕೆ ಸ್ಪಂದಿಸುವುದು ನಮ್ಮ ಮೊದಲ ಕರ್ತವ್ಯ. ಬರದ ಪರಿಣಾಮ ಎದುರಿಸಲು ಸರ್ಕಾರದೊಂದಿಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.”
— ಭೀಮಸೇನ ಚಿಮ್ಮನಕಟ್ಟಿ, ಶಾಸಕ, ಬಾದಾಮಿ


ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ