ಬಾಗಲಕೋಟೆ: ಗ್ರಾಮೀಣ ಜನರು ಆರೋಗ್ಯವಂತರಾಗಿದ್ದರೆ ದೇಶವೂ ಆರೋಗ್ಯವಂತವಾಗಿರುತ್ತದೆ. ಆರೋಗ್ಯವಂತ ರೈತರಿಂದ ಆರೋಗ್ಯವಂತ ದೇಶ ನಿರ್ಮಾಣ ಸಾಧ್ಯ ಎಂದು ಎಚ್ಎಸ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಡಾ. ನವೀನ ಚರಂತಿಮಠ ಹೇಳಿದರು.
ಬಾಗಲಕೋಟೆ ಗ್ರಾಮೀಣ ಮಂಡಲದ ಬಿಜೆಪಿ ಹಾಗೂ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜು ಮತ್ತು ಶ್ರೀ ಹಾನಗಲ್ ಕುಮಾರೇಶ್ವರ ಆಸ್ಪತ್ರೆಯ ಸಹಯೋಗದಲ್ಲಿ ಬೆಣ್ಣೂರು ಗ್ರಾಮದ ಮಲ್ಲಿಕಾರ್ಜುನ ಪ್ರೌಢಶಾಲೆ ಆವರಣದಲ್ಲಿ ಸೋಮವಾರ ಆಯೋಜಿಸಿದ್ದ ‘ಸೇವಾ ಸಂಕಲ್ಪ ಅಭಿಯಾನ’ದ ಅಂಗವಾಗಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.
ನಿಯಮಿತ ಆರೋಗ್ಯ ತಪಾಸಣೆಯಿಂದ ವಿವಿಧ ರೋಗಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಸಕಾಲದಲ್ಲಿ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ. ಗ್ರಾಮೀಣ ಜನರು ಇಂತಹ ಆರೋಗ್ಯ ಶಿಬಿರಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಮುತ್ತಣ್ಣ ಬೆಣ್ಣೂರು ಮಾತನಾಡಿ, ಆರೋಗ್ಯವೇ ನಮ್ಮೆಲ್ಲರ ಭಾಗ್ಯ. ಮಕ್ಕಳು, ಹಿರಿಯರು ಸೇರಿದಂತೆ ಪ್ರತಿಯೊಬ್ಬರ ಆರೋಗ್ಯದ ರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಬೇಕು ಎಂದರು.
ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವೆ ಹಾಗೂ ಉತ್ತಮ ಆಡಳಿತದ ಅಂಗವಾಗಿ ಗ್ರಾಮೀಣ ಜನರ ಆರೋಗ್ಯ ಸುಧಾರಿಸುವ ಉದ್ದೇಶದಿಂದ ‘ನಮ್ಮ ಆರೋಗ್ಯ, ನಮ್ಮ ಕರ್ತವ್ಯ’ ಎಂಬ ಆಶಯದೊಂದಿಗೆ ಶಿಬಿರ ಆಯೋಜಿಸಲಾಗಿದೆ ಎಂದರು.
ಶಿಬಿರದಲ್ಲಿ 200ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ವೈದ್ಯರು ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಸಲಹೆಗಳನ್ನು ನೀಡಿದರು. ಇದೇ ಸಂದರ್ಭದಲ್ಲಿ ರಕ್ತದಾನ ಶಿಬಿರವೂ ನಡೆಯಿತು.
ವೈದ್ಯರಾದ ಡಾ. ಸಮೀರಕುಮಾರ ಕುಲಕರ್ಣಿ, ಡಾ. ಕೀರಣ ಬಿಜಾಪುರ, ಡಾ. ವಿಠ್ಠಲ ಕುಂಬಾರ, ಡಾ. ಜ್ಯೋತಿ ಉಳಿಗೇರ, ಡಾ. ವಿಶ್ವನಾಥ ಸೇರಿದಂತೆ ವೈದ್ಯರು ಹಾಗೂ ಸಿಬ್ಬಂದಿ ಶಿಬಿರದಲ್ಲಿ ಸೇವೆ ಸಲ್ಲಿಸಿದರು. ಗ್ರಾಮಸ್ಥರು ಹಾಗೂ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.



ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ