ಬಾಗಲಕೋಟೆ: ನಗರದ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ 14 ಮತ್ತು 17 ವರ್ಷ ವಯೋಮಿತಿಯ ರಾಜ್ಯಮಟ್ಟದ ಜೂಡೋ ಪಂದ್ಯಾವಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಶುಕ್ರವಾರ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಪಂದ್ಯಾವಳಿ ಆಯೋಜಿಸಲಾಗಿದೆ.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಸಂಗಪ್ಪ ಅವರು, ಕ್ರೀಡಾಕೂಟಗಳಲ್ಲಿ ಭಾಗವಹಿಸುವುದು ಮುಖ್ಯವಾಗಿದ್ದು, ಸೋಲು-ಗೆಲುವು ನಂತರದ ವಿಚಾರವಾಗಿದೆ. ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಪ್ರತಿಭೆ ಪ್ರದರ್ಶಿಸುವುದರ ಜತೆಗೆ ಅನುಭವ ಪಡೆಯಬೇಕು. ನಿರಂತರ ಅಭ್ಯಾಸ ಮತ್ತು ಶಿಸ್ತಿನಿಂದ ಉತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟದಲ್ಲಿಯೂ ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ಹಾರೈಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ ಮಾತನಾಡಿ, ಕ್ರೀಡಾಪಟುಗಳು ಕ್ರೀಡಾ ಮನೋಭಾವದಿಂದ ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಗೆಲುವಿನ ಜತೆಗೆ ಎದುರಾಳಿಗಳನ್ನು ಗೌರವಿಸುವುದು ಹಾಗೂ ಕ್ರೀಡಾ ನಿಯಮಗಳನ್ನು ಪಾಲಿಸುವುದು ಮುಖ್ಯ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಸಿ. ಸೀತಾರಾಮು ಮಾತನಾಡಿ, ರಾಜ್ಯದ 28 ಜಿಲ್ಲೆಗಳಿಂದ ಒಟ್ಟು 700 ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಭಾಗವಹಿಸುತ್ತಿದ್ದಾರೆ. ಇವರಲ್ಲಿ 350 ಬಾಲಕರು ಹಾಗೂ 350 ಬಾಲಕಿಯರು ಇದ್ದಾರೆ. ಪ್ರಾಥಮಿಕ ವಿಭಾಗದಿಂದ 14 ಹಾಗೂ ಪ್ರೌಢಶಾಲಾ ವಿಭಾಗದಿಂದ 19 ಕ್ರೀಡಾಪಟುಗಳು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಲಿದ್ದಾರೆ. ನವದೆಹಲಿಯಲ್ಲಿ ಈ ತಿಂಗಳು ನಡೆಯಲಿರುವ ರಾಷ್ಟ್ರಮಟ್ಟದ ಜೂಡೋ ಪಂದ್ಯಾವಳಿಯಲ್ಲಿ ಆಯ್ಕೆಯಾದ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಲ್.ಕೆ. ತೋರಣಗಟ್ಟಿ, ದೈಹಿಕ ಶಿಕ್ಷಣ ಪರಿವೀಕ್ಷಕ ಆರ್.ಆರ್. ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.




ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ