*ಜಿಲ್ಲೆಯ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ದಿ ಕುರಿತು ಸಭೆ*
*ಶಾಲಾ ಶಿಕ್ಷಣ ಗುಣಮಟ್ಟದ ಸುಧಾರಣೆಗೆ ಆದ್ಯತೆ : ವಿ.ರಶ್ಮಿ*
ಬಾಗಲಕೋಟೆ : ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಿ, ನಿಗದಿತ ಅವಧಿಯೊಳಗೆ ಗುರಿ ಸಾಧಿಸುವಂತೆ ಶಾಲಾ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ವಿ.ರಶ್ಮಿ ಮಹೇಶ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಮಂಗಳವಾರ ಶೈಕ್ಷಣಿಕ ಪ್ರಗತಿ ಪರಿಶೀಲನೆ ಹಾಗೂ ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಫಲಿತಾಂಶ ಸುಧಾರಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು, ತಿಂಗಳಿಗೆ ಕನಿಷ್ಟ ಒಂದು ಬಾರಿಯಾದರೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಫಲಿತಾಂಶ ಪರಿಶೀಲನಾ ಸಭೆ ನಡೆಸಬೇಕು ಎಂದರು.
ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಮುಖ್ಯೋಪಾಧ್ಯಾಯರ ಸಭೆ ಕರೆದು, ಕಳೆದ ವರ್ಷದ ಫಲಿತಾಂಶವನ್ನು ಆಧಾರವಾಗಿಟ್ಟುಕೊಂಡು ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕಾರ್ಯದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಸಹ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು. ಸಿಎಸ್ಆರ್ ಅನುದಾನದಡಿ ಜಿಲ್ಲೆಯ 60 ಶಾಲೆಗಳ ಅಭಿವೃದ್ಧಿಗೆ ಗುರುತಿಸಲಾಗಿರುವ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿ, ಪ್ರತಿ ಶಾಲೆಯ ಅಭಿವೃದ್ಧಿಗೆ ನಿರ್ಧಿಷ್ಟ ಯೋಜನೆ ರೂಪಿಸಬೇಕು. ಶಾಲೆಗಳ ಅಭಿವೃದ್ಧಿ ಕಾರ್ಯ ಐದು ವರ್ಷಗಳವರೆಗೆ ಮುಂದೂಡಬಾರದು. ವಾರ್ಷಿಕ ಗುರಿ ನಿಗದಿಪಡಿಸಿ ಅದೇ ವರ್ಷದಲ್ಲಿ ಅಭಿವೃದ್ದಿಗೆ ಕ್ರಮವಹಿಸಬೇಕು ಎಂದು ವಿ.ರಶ್ಮಿ ಸೂಚಿಸಿದರು.
ಶಾಲಾ ಕಟ್ಟಡ ನಿರ್ಮಾಣಕ್ಕಾಗಿ ದಾನದ ರೂಪದಲ್ಲಿ ಪಡೆದಿರುವ ಜಮೀನುಗಳನ್ನು ಇಲಾಖೆಯ ಹೆಸರಿಗೆ ಹಸ್ತಾಂತರಿಸುವ ಪ್ರಕ್ರಿಯೆ ಶೇ.100 ರಷ್ಟು ಪೂರ್ಣಗೊಳಿಸಬೇಕು. ಈ ಕುರಿತು ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ಸೂಚಿಸಿದರು. ಕಟ್ಟಡಗಳು ನೆಲಸಮ ಆಗುವವರೆಗೆ ಕಾಯದೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು. ಸಿಎಸ್ಆರ್ನಡಿ 60 ಶಾಲೆಗಳ ಅಭಿವೃದ್ಧಿ ಕುರಿತು ಮಾತನಾಡಿದ ಅವರು ಶಾಲೆಗಳಲ್ಲಿ ಗ್ರಂಥಾಲಯ, ಡಿಜಿಟಲ್ ಸೌಲಭ್ಯ ಹಾಗೂ ಅಗತ್ಯ ಮೂಲಸೌಕರ್ಯಗಳಿಗೆ ಆದ್ಯತೆ ನೀಡಬೇಕು. 15 ದಿನಗಳೊಳಗೆ ತಿಳುವಳಿಕಾ ಒಡಂಬಡಿಕೆ (ಎಂಒಯು) ಮಾಡಿಕೊಳ್ಳಬೇಕು ಹಾಗೂ ಕಾಮಗಾರಿಗಳ ಪ್ರಗತಿಯನ್ನು ಪ್ರತಿದಿನವೂ ಪರಿಶೀಲಿಸಿ ಅನುಸರಣೆ ಮಾಡಬೇಕು ಎಂದರು.
ತರಗತಿಯಲ್ಲಿ 20ಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಶಾಲೆಗಳನ್ನು ಗುರುತಿಸಿ, ಅಲ್ಲಿನ ವಿದ್ಯಾರ್ಥಿಗಳನ್ನು ಸಮೀಪದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಅಥವಾ ಪಿಎಂಶ್ರೀ ಶಾಲೆಗಳಿಗೆ ಸ್ಥಳಾಂತರಿಸುವ ಕುರಿತು ಕ್ರಮ ಕೈಗೊಳ್ಳಬೇಕು. ಒಂದು ಕೆಪಿಎಸ್ ಅಥವಾ ಪಿಎಂಶ್ರೀ ಶಾಲೆಗೆ ಕನಿಷ್ಠ 100 ವಿದ್ಯಾರ್ಥಿಗಳನ್ನು ಹಸ್ತಾಂತರಿಸಲು ಅವಕಾಶವಿದೆ. ಇದರಿಂದ ಶಾಲೆಗಳನ್ನು ವಿಲೀನಗೊಳಿಸಲಾಗುವುದಿಲ್ಲ; ತಾತ್ಕಾಲಿಕವಾಗಿ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುತ್ತದೆ ಎಂದು ಸ್ಪಷ್ಟಪಡಿಸಿದರು. ಕೆಪಿಎಸ್ ಅಥವಾ ಪಿಎಂಶ್ರೀ ಶಾಲೆಗಳಿಗೆ ತೆರಳಲು ಮೊದಲಿನ ಶಾಲೆಯಿಂದ ಅಗತ್ಯ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ವಾಹನ ಬಾಡಿಗೆ ಪಡೆಬಹುದಾಗಿದೆ. ವಾರದಲ್ಲಿ ಮಾಹಿತಿ ಸಲ್ಲಿಸುವಂತೆ ಸೂಚಿಸಿದರು.
ಶಾಲೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರೂ, ಅಲ್ಲಿನ ಅಡುಗೆ ಸಿಬ್ಬಂದಿಯನ್ನು ತೆಗೆದುಹಾಕಬಾರದು ಎಂದು ಸ್ಪಷ್ಟಪಡಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿಗಳು ವೈಯಕ್ತಿಕ ಆಸಕ್ತಿ ವಹಿಸಿ ಈ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು. ಎಲ್ಕೆಜಿ, ಯುಕೆಜಿ (ಇಸಿಸಿಇ) ಶಾಲೆಗಳ ಮಕ್ಕಳ ಆಧಾರ್ ಸೀಡಿಂಗ್ ಪೂರ್ಣಗೊಳಿಸಬೇಕು. ಮಕ್ಕಳ ದಾಖಲಾತಿಯಲ್ಲಿ ಅಪಾರ್ ಐಡಿ ನಮೂದಾಗುವಂತೆ ನೋಡಿಕೊಳ್ಳಬೇಕು. ಶಾಲೆಗಳ ದಾಖಲಾತಿ ಪ್ರಮಾಣವನ್ನು ಶೇ.35ರಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು. ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಕಂಡುಬಂದರೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಭೆಯಲ್ಲಿ ಕೆ.ಎಸ್.ಇ.ಎ.ಬಿಯ ಅಧ್ಯಕ್ಷರು ಹಾಗೂ ಮಧ್ಯಾಹ್ನ ಬಿಸಿ ಊಟದ ನಿರ್ದೇಶಕ ಪ್ರಕಾಶ ಜಿ.ಟಿ, ಸಮಗ್ರ ಶಿಕ್ಷಣ ಕರ್ನಾಟಕದ ಯೋಜನಾ ನಿರ್ದೇಶಕಿ ವಿದ್ಯಾಕುಮಾರಿ, ದಾರವಾಢ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ, ಜಿಲ್ಲಾಧಿಕಾರಿ ಸಂಗಪ್ಪ, ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸೀತಾರಾಮು ಸೇರಿದಂತೆ ಇತರರು ಉಪಸ್ಥಿತರಿದ್ದರು.


ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ