ಇಳಕಲ್ಲ: ಕೆಎಸ್‌ಆರ್‌ಟಿಸಿ ಬಸ್‌ಗೆ ಲಾರಿ ಡಿಕ್ಕಿ; ಹಲವರಿಗೆ ಗಾಯ

ಇಳಕಲ್ಲ: ಪ್ರಯಾಣಿಕರನ್ನು ಇಳಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಆರೇಳು ಪ್ರಯಾಣಿಕರು ಗಾಯಗೊಂಡ ಘಟನೆ ಗುರುವಾರ ಇಳಕಲ್ಲ ನಗರದ ಸಮೀಪದ ಹಾದಿಬಸವನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಚಿಕ್ಕಕೊಡಗಲಿ ತಾಂಡಾದಿಂದ ಇಳಕಲ್ಲಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್, ಹಾದಿಬಸವನಗರದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಪ್ರಯಾಣಿಕರನ್ನು ಇಳಿಸಲು ನಿಂತಿತ್ತು. ಈ ವೇಳೆ ಹಿಂದಿನಿಂದ ಅತಿವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಲಾರಿಯೊಂದು ಬಸ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಬಸ್‌ನ ಹಿಂಭಾಗ ಸಂಪೂರ್ಣ ಜಖಂಗೊಂಡಿದೆ. ಬಸ್‌ನ ಹಿಂಬದಿಯ ಸೀಟಿನಲ್ಲಿ ಕುಳಿತಿದ್ದ ಸುಮಾರು ಆರೇಳು ಪ್ರಯಾಣಿಕರ ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಇಳಕಲ್ಲ ಶಹರ ಪೊಲೀಸ್ ಠಾಣೆಯ ಪಿಎಸ್‌ಐ ನಾಗರಾಜ ಗಡದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಕಾಮೆಂಟ್‌ಗಳು